RCB vs RR: ಒಟ್ಟು ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಗೆದ್ದ ಬಲಿಷ್ಠ ತಂಡ ಯಾವುದು?

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಮೇ 14 ) ಭಾನುವಾರ 60 ಹಾಗೂ 61 ನೇ ಪಂದ್ಯಗಳು ಜರುಗಲಿವೆ. ಮಧ್ಯಾಹ್ನ ನಡೆಯಲಿರುವ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಸಂಜೆ ಆರಂಭಗೊಳ್ಳಲಿರುವ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಇತ್ತಂಡಗಳ ನಡುವಿನ ಈ ಪಂದ್ಯ ಜೈಪುರದ ಸಾವೈ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಇತ್ತಂಡಗಳಿಗೂ ಸಹ ಅತಿಮುಖ್ಯದ್ದಾಗಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನವನ್ನು ಪಡೆದುಕೊಂಡಿದೆ.
ಅತ್ತ್ ರಾಜಸ್ಥಾನ್ ರಾಯಲ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು ಉಳಿದ 6 ಪಂದ್ಯಗಳಲ್ಲಿ ಸೋಲನ್ನು ಅನುಭವಿಸುವುದರ ಮೂಲಕ 12 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನ ಪಡೆದುಕೊಳ್ಳುವುದರ ಜತೆಗೆ ಪ್ಲೇಆಫ್ ಹಾದಿಯನ್ನು ಸಹ ಸುಗಮ ಮಾಡಿಕೊಳ್ಳಲಿವೆ. ಹೀಗಾಗಿಯೇ ಎರಡೂ ತಂಡಗಳಿಗೂ ಸಹ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
ಹೀಗೆ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಕುತೂಹಲ ಹೆಚ್ಚಾಗಿದ್ದು, ಇದು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇತ್ತಂಡಗಳ ನಡುವೆ ನಡೆಯಲಿರುವ ಎರಡನೇ ಪಂದ್ಯವಾಗಿದೆ. ಹೌದು, ಈ ಬಾರಿಯ ಟೂರ್ನಿಯ 32ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 189 ರನ್ ಕಲೆಹಾಕಿ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 190 ರನ್‌ಗಳ ಗುರಿಯನ್ನು ನೀಡಿತ್ತು.
ಈ ಗುರಿಯನ್ನು ಬೆನ್ನತ್ತಲು ಯತ್ನಿಸಿದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 182 ರನ್ ಕಲೆಹಾಕಿತ್ತು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು 7 ರನ್‌ಗಳ ಗೆಲುವನ್ನು ಕಂಡಿತ್ತು. ಇದು ಈ ಟೂರ್ನಿಯ ಮುಖಾಮುಖಿಯಾದರೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇತ್ತಂಡಗಳು ಒಟ್ಟು 29 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದವು.
ಈ ಪೈಕಿ 14 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು ಕಂಡಿದ್ದರೆ, 12 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವನ್ನು ಕಂಡಿದೆ ಹಾಗೂ ಉಳಿದ 3 ಪಂದ್ಯಗಳು ಯಾವುದೇ ಫಲಿತಾಂಶವಿಲ್ಲದೇ ಅಂತ್ಯಗೊಂಡಿದೆ. ಈ ಮೂಲಕ ಮುಖಾಮುಖಿ ಕಾದಾಟದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಜಸ್ಥಾನ್ ರಾಯಲ್ಸ್ ತಂಡಕ್ಕಿಂತ ತುಸು ಮುನ್ನಡೆ ಕಾದುಕೊಂಡಿದೆ.
ಇನ್ನು ಕಳೆದ ಬಾರಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮೂರು ಬಾರಿ ಮುಖಾಮುಖಿಯಾಗಿದ್ದವು. ಮೊದಲಿಗೆ ನಡೆದ ಲೀಗ್ ಹಂತದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 4 ವಿಕೆಟ್‌ಗಳ ಗೆಲುವನ್ನು ಕಂಡಿತ್ತು. ಬಳಿಕ ನಡೆದ ಎರಡನೇ ಲೀಗ್ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ 29 ರನ್‌ಗಳ ಗೆಲುವನ್ನು ಕಂಡಿತ್ತು.
ಮೂರನೇ ಬಾರಿಗೆ ಎರಡೂ ತಂಡಗಳು ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸೆಣಸಾಡಿದ್ದವು. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 7 ವಿಕೆಟ್‌ಗಳ ಅಂತರದಿಂದ ಗೆದ್ದಿತ್ತು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯಿಂದ ಹೊರಬಿದ್ದಿತ್ತು.












Click it and Unblock the Notifications