RCB vs SRH: ಮುಖಾಮುಖಿಯಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ಬಲಿಷ್ಠ ತಂಡ ಯಾವುದು?

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 65ನೇ ಪಂದ್ಯ ಇಂದು ( ಮೇ 18 ) ನಡೆಯುತ್ತಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿವೆ.
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಟೂರ್ನಿಯಿಂದ ಈಗಾಗಲೇ ಹೊರಬಿದ್ದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕಿಂತ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಈ ಪಂದ್ಯ ಮುಖ್ಯದ್ದಾಗಿದೆ.
ಹೌದು, ಟೂರ್ನಿಯಲ್ಲಿ ಇಲ್ಲಿಯವರೆಗೂ 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಉಳಿದರೆಡು ಪಂದ್ಯಗಳನ್ನು ಗೆದ್ದರೆ ಪ್ಲೇಆಫ್ ಪ್ರವೇಶಿಸಲಿದೆ. ಹೀಗಾಗಿ ಈ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲ್ಲಲೇಬೇಕಿದ್ದು, ಗೆದ್ದರೆ ಮಾತ್ರ ಪ್ಲೇಆಫ್ ಕನಸು ಜೀವಂತವಾಗಿ ಉಳಿದುಕೊಳ್ಳಲಿದೆ.
ಅತ್ತ ಸನ್ ರೈಸರ್ಸ್ ಹೈದರಾಬಾದ್ 12 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಈ ಮೂಲಕ ಸನ್ ರೈಸರ್ಸ್ ಹೈದರಾಬಾದ್ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಕೈತಪ್ಪಿಸಿಕೊಂಡಿದೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಮಹತ್ವದ ಪಂದ್ಯವಿದ್ದಾಗ ಸನ್ ರೈಸರ್ಸ್ ಎದುರಾದಾಗಲೆಲ್ಲಾ ಆರ್‌ಸಿಬಿಗೆ ಸೋಲುಣಿಸಿದ್ದು ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಂಕಾಗದೇ ಲೆಕ್ಕಾಚಾರವನ್ನು ಉಲ್ಟಾ ಮಾಡುತ್ತಾ ಕಾದು ನೋಡಬೇಕಿದೆ.
ಹೀಗೆ ಇಂತಹ ಮುಖ್ಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲ್ಲುತ್ತಾ ಅಥವಾ ಸೋಲುತ್ತಾ ಎಂಬ ಚರ್ಚೆಗಳು ಜೋರಾಗಿದ್ದು, ಇಲ್ಲಿಯವರೆಗೂ ಇತ್ತಂಡಗಳು ಮುಖಾಮುಖಿಯಾದ ಒಟ್ಟು ಪಂದ್ಯಗಳೆಷ್ಟು ಹಾಗೂ ಈ ಪೈಕಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದು ಬಲಿಷ್ಠವೆನಿಸಿಕೊಂಡಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಇಲ್ಲಿಯವರೆಗೂ ಒಟ್ಟು 22 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿವೆ. ಈ ಪೈಕಿ ಸನ್ ರೈಸರ್ಸ್ ಹೈದರಾಬಾದ್ 12 ಪಂದ್ಯಗಳಲ್ಲಿ ಗೆದ್ದಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು 9 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಒಂದು ಪಂದ್ಯದಲ್ಲಿ ಯಾವುದೇ ಫಲಿತಾಂಶ ಬಂದಿಲ್ಲ.
ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಒಟ್ಟಾರೆ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಸ್ಪಷ್ಟ ಮೇಲುಗೈ ಸಾಧಿಸಿದೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಖಾಮುಖಿಯಾಗುತ್ತಿರುವ ಮೊದಲ ಪಂದ್ಯ ಇದಾಗಿದೆ. ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎರಡು ಪಂದ್ಯಗಳಲ್ಲಿ ಇತ್ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು.
ಈ ಪೈಕಿ ಮೊದಲ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ 9 ವಿಕೆಟ್‌ಗಳ ಅಂತರದಿಂದ ಗೆಲುವು ಕಂಡಿದ್ದರೆ, ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 67 ರನ್‌ಗಳ ಅಂತರದಿಂದ ಗೆದ್ದಿತ್ತು.












Click it and Unblock the Notifications