SRH vs KKR: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಪಂದ್ಯ ಗೆದ್ದ ತಂಡ ಯಾವುದು?

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 47ನೇ ಪಂದ್ಯ ಇಂದು ( ಮೇ 4 ) ನಡೆಯಲಿದ್ದು, ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಈ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾತ್ರಿ 7.30ಕ್ಕೆ ಪಂದ್ಯ ಶುರುವಾಗಲಿದೆ. ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ಈ ಎರಡೂ ತಂಡಗಳು ಸಹ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿಲ್ಲ.
9 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಕೊಲ್ಕತ್ತಾ ನೈಟ್ ರೈಡರ್ಸ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದರೆ, 8 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
ಹೀಗೆ ಎಲ್ಲಾ ತಂಡಗಳು ಪ್ಲೇಆಫ್ ಸುತ್ತಿಗೆ ಸನಿಹವಾಗುತ್ತಿದ್ದಾರೆ ಈ ಎರಡು ತಂಡಗಳು ಕೇವಲ ಆರು ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ತೀವ್ರ ಹಿನ್ನಡೆ ಅನುಭವಿಸಿವೆ. ಇತ್ತಂಡಗಳು ತಮ್ಮ ಪ್ಲೇಆಫ್ ಆಸೆಯನ್ನು ಜೀವಂತವಾಗಿ ಉಳಿಸಿಕೊಳ್ಳಬೇಕೆಂದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ.
ಇನ್ನು ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿರುವ ಈ ಬಾರಿಯ ಎರಡನೇ ಪಂದ್ಯ ಇದಾಗಿದ್ದು, ಇತ್ತಂಡಗಳು ಇಲ್ಲಿಯವರೆಗೂ ಒಟ್ಟು 24 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪೈಕಿ ಸನ್ ರೈಸರ್ಸ್ ಹೈದರಾಬಾದ್ 9 ಪಂದ್ಯಗಳಲ್ಲಿ ಗೆದ್ದಿದ್ದರೆ, ಕೊಲ್ಕತ್ತಾ ನೈಟ್ ರೈಡರ್ಸ್ 15 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ಮುಖಾಮುಖಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ.
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 19ನೇ ಪಂದ್ಯದಲ್ಲಿ ಮೊದಲಿಗೆ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಸನ್ ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 228 ರನ್ ಕಲೆಹಾಕಿ ಎದುರಾಳಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 229 ರನ್‌ಗಳ ಗುರಿಯನ್ನು ನೀಡಿತ್ತು.
ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತ್ತು. ಈ ಮೂಲಕ ಸನ್ ರೈಸರ್ಸ್ ಹೈದರಾಬಾದ್ 23 ರನ್‌ಗಳ ಗೆಲುವನ್ನು ಕಂಡಿತ್ತು. ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಸೋತು ತವರಿನಲ್ಲಿಯೇ ಮುಖಭಂಗ ಅನುಭವಿಸಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಈ ಬಾರಿ ಗೆದ್ದು ಸೇಡು ತೀರಿಸಿಕೊಳ್ಳುವ ಯೋಜನೆಯಲ್ಲಿದೆ.
ಸಂಭಾವ್ಯ ಆಡುವ ಬಳಗಗಳು:
ಸನ್ ರೈಸರ್ಸ್ ಹೈದರಾಬಾದ್ ಸಂಭಾವ್ಯ ಆಡುವ ಬಳಗ: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್ (ನಾಯಕ), ಅಭಿಷೇಕ್ ಶರ್ಮಾ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಭುವನೇಶ್ವರ್ ಕುಮಾರ್, ಅಕೇಲ್ ಹೊಸೈನ್, ಮಯಾಂಕ್ ಮಾರ್ಕಾಂಡೆ, ಉಮ್ರಾನ್ ಮಲಿಕ್, ಟಿ ನಟರಾಜನ್
ಕೊಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ಆಡುವ ಬಳಗ: ನಾರಾಯಣ್ ಜಗದೀಸನ್ (ವಿಕೆಟ್ ಕೀಪರ್), ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಡೇವಿಡ್ ವೈಸ್, ಶಾರ್ದೂಲ್ ಠಾಕೂರ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಸುಯಶ್ ಶರ್ಮಾ












Click it and Unblock the Notifications