Teacher Recruitment: ರಾಜ್ಯದಲ್ಲಿ 51,000 ಶಿಕ್ಷಕರ ನೇಮಕಾತಿಗೆ ಆದೇಶ, ಇಲ್ಲಿದೆ ಮಾಹಿತಿ
Teacher Recruitment: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 51,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ 2026-27ನೇ ಶೈಕ್ಷಣಿಕ ಸಾಲು ಮೇ ತಿಂಗಳಿನಿಂದಲೇ ಆರಂಭವಾಗುತ್ತಿದೆ. ಆದ್ದರಿಂದ ಶಾಲೆಗಳ ಆರಂಭದಲ್ಲೇ ಶಿಕ್ಷಕರ ಕೊರತೆ ಆಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಶಾಲೆಗಳಿಗೆ 40,000 ಮತ್ತು ಪ್ರೌಢ ಶಾಲೆಗಳಿಗೆ 11,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮಾಡಿಕೊಳ್ಳಲು ಸೂಚಿಸಿದೆ.

ಈ ನೇಮಕಾತಿಯು ಕೇವಲ ತಾತ್ಕಾಲಿಕ ಆಗಿದ್ದು, ಖಾಯಂ ಶಿಕ್ಷಕರು ನೇಮಕ ಆಗುವವರೆಗೆ ಅಥವಾ ಪ್ರಸ್ತುತ ಶೈಕ್ಷಣಿಕ ವರ್ಷದ (2026-27) ಅಂತ್ಯದವರೆಗೆ ಮಾತ್ರ ಅನ್ವಯ ಆಗುತ್ತದೆ. ಶೈಕ್ಷಣಿಕ ವರ್ಷದ ಆರಂಭದಲ್ಲೇ ಅತಿಥಿ ಶಿಕ್ಷಕರ ಕೊರತೆ ನೀಗಿಸುವುದರಿಂದ ವಿದ್ಯಾರ್ಥಿಗಳ ನಿರಂತರ ಕಲಿಕೆ ಮತ್ತು ಶಾಲಾ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಅತಿಥಿ ಶಿಕ್ಷಕರ ಗೌರವಧನ ಪಾವತಿಗೆ ಅಗತ್ಯವಿರುವ ಅನುದಾನದ ವಿವರ ಹಾಗೂ ಜಿಲ್ಲಾ ಅಥವಾ ತಾಲ್ಲೂಕುವಾರು ಹಂಚಿಕೆಯ ಸಂಪೂರ್ಣ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.
ಉದ್ಯೋಗ ನೇಮಕಾತಿ ಪತ್ರಗಳ ವಿತರಣೆ
ಮತ್ತೊಂದೆಡೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ (ಮೇ 23) ವರ್ಚುವಲ್ ಮೂಲಕ ನಡೆದ ರೋಜ್‌ಗಾರ್ ಮೇಳ ಕಾರ್ಯಕ್ರಮದಲ್ಲಿ ದೇಶದ 51,000ಕ್ಕೂ ಅಧಿಕ ಯುವಕರಿಗೆ ಕೇಂದ್ರ ಸರ್ಕಾರದ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಣೆ ಮಾಡಿದರು. ದೇಶದ 47 ಸ್ಥಳಗಳಲ್ಲಿ ಏಕಕಾಲದಲ್ಲಿ ಆಯೋಜನೆ ಮಾಡಲಾಗಿದ್ದ ಈ ಕಾರ್ಯಕ್ರಮದಲ್ಲಿ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಣೆ ಮಾಡಲಾಯಿತು.
ಈ ಕುರಿತು ಮಾತನಾಡಿದ ಪ್ರಧಾನಿ ಮೋದಿ, 'ಇಂದು ದೇಶದ ಸಾವಿರಾರು ಯುವಕರಿಗೆ ಬಹಳ ಮಹತ್ವದ ದಿನ. 51,000ಕ್ಕೂ ಹೆಚ್ಚು ಯುವಕರು ಸರ್ಕಾರಿ ಉದ್ಯೋಗಕ್ಕಾಗಿ ನೇಮಕಾತಿ ಪತ್ರಗಳನ್ನು ಪಡೆದಿದ್ದಾರೆ. ದೇಶದ ಅಭಿವೃದ್ಧಿ ಪಯಣದಲ್ಲಿ ನೀವು ಎಲ್ಲರೂ ಪ್ರಮುಖ ಪಾಲುದಾರರಾಗುತ್ತಿದ್ದೀರಿ ಎಂದು ಹೇಳಿದರು.
ರೈಲ್ವೆ, ಬ್ಯಾಂಕಿಂಗ್, ರಕ್ಷಣಾ, ಆರೋಗ್ಯ, ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಯುವಕರು ಹೊಸ ಜವಾಬ್ದಾರಿಗಳನ್ನು ನಿಭಾಯಿಸಲಿದ್ದಾರೆ. ಮುಂದಿನ ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದ ಸಂಕಲ್ಪ ಸಾಕಾರಗೊಳಿಸುವಲ್ಲಿ ನಿಮ್ಮ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.












Click it and Unblock the Notifications