Dasara 2023; ಕೊಪ್ಪಳದಲ್ಲಿ ದಸರಾ ಕ್ರೀಡಾಕೂಟಕ್ಕೆ ಚಾಲನೆ
ಕೊಪ್ಪಳ, ಸೆಪ್ಟೆಂಬರ್ 27; ಈ ಬಾರಿಯ ದಸರಾಕ್ಕೆ ಸಿದ್ಧತೆಗಳು ನಡೆಯುತ್ತಿರುವಾಗಲೇ 2023ರ ದಸರಾ ಕ್ರೀಡಾಕೂಟಕ್ಕೆ ಚಾಲನೆ ಸಿಕ್ಕಿದೆ. ಕೊಪ್ಪಳದಲ್ಲಿ ದಸರಾ ಕ್ರೀಡಾಕೂಟಕ್ಕೆ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಚಾಲನೆ ನೀಡಿದರು.
ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ದಸರಾ ಕ್ರೀಡಾಕೂಟ 2023 ಆಯೋಜನೆ ಮಾಡಲಾಗಿದೆ.

ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಹೇಮಲತಾ ನಾಯಕ, "ಯುವಜನತೆ ಕ್ರೀಡೆಯಲ್ಲಿ ಭಾಗಿಯಾಗಲು ಆಸಕ್ತಿ ತೋರಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಅತ್ಯವಶ್ಯಕವಾಗಿದೆ. ಕ್ರೀಡೆಯಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ನಮ್ಮ ದೇಶದ ಇಂದಿನ ಕ್ರೀಡಾಪಟುಗಳೇ ಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಗಳಿಗೂ ಪ್ರಮುಖ್ಯತೆ ನೀಡಬೇಕು" ಎಂದು ಕರೆ ನೀಡಿದರು.
ಶಿಸ್ತನ್ನು ಕಾಪಾಡಿಕೊಳ್ಳಬೇಕು; ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಮಾತನಾಡಿ, "ಮಕ್ಕಳು ಪಾಠದ ಜೊತೆಗೆ ಪ್ರೀತಿಯಿಂದ ಸಂತೋಷದಿಂದ ಕ್ರೀಡೆಯಲ್ಲಿ ಭಾಗವಹಿಸಿ ಸಾಧನೆ ಮಾಡಬೇಕು. ಜೊತೆಗೆ ಕ್ರೀಡೆಯಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಬೇಕು" ಎಂದು ಸಲಹೆ ನೀಡಿದರು.
ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಅಧಿಕಾರಿ ವಿಠ್ಠಲ ಜಾಬಗೌಡರ ಮಾತನಾಡಿ, "ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವೈಯಕ್ತಿಕ ಪ್ರಥಮ, ದ್ವಿತೀಯ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಾಳುಗಳು ಭಾಗವಹಿಸಿದ್ದಾರೆ" ಎಂದರು.
"ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟಬಾಲ್, ಖೋಖೋ, ಕಬಡ್ಡಿ, ಬಾಸ್ಕೆಟಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಥ್ರೋಬಾಲ್, ಹ್ಯಾಂಡಬಾಲ್, ಹಾಕಿ, ಟೇಬಲ್ ಟೆನ್ನೀಸ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳು ಹಾಗೂ ಟೆನ್ನೀಸ್, ನೆಟ್‌ಬಾಲ್ ಮತ್ತು ಈಜು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ" ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ 14 ವರ್ಷದೊಳಗಿನ ಬಾಲಕಿಯರ ವಾಲಿಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಕೊಪ್ಪಳ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸಿಇಓ ಅಭಿನಂದಿಸಿದರು. ಕ್ರೀಡಾಪಟುಗಳಿಗೆ ತರಬೇತಿ ನೀಡಿದ ತರಬೇತುದಾರರಾದ ಸುರೇಶ ಮತ್ತು ಕಮಲ್ ಸಿಂಗ್ ಅವರನ್ನು ಸನ್ಮಾನಿಸಲಾಯಿತು.
ಯೋಗ ಪ್ರದರ್ಶನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕೊಪ್ಪಳದ ಶಾರದಾ ಇಂಟರ್‌ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿ ಸುಷ್ಮಾ ಪಾಟೀಲ ಯೋಗ ಕಲೆಯನ್ನು ಪ್ರದರ್ಶಿಸಿ ಮೆಚ್ಚುಗೆ ಗಳಿಸಿದರು.
2023ನೇ ಸಾಲಿನ ದಸರಾ ಕ್ರೀಡಾಕೂಟದ ಕುರಿತು ಈಗಾಗಲೇ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ವಿಭಾಗ, ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಯಾವ-ಯಾವ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ. ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಮೈಸೂರಿನಲ್ಲಿ ದಿನಾಂಕ 15/10/2023 ರಿಂದ 19/10/2023ರ ತನಕ ಚಾಮುಂಡಿ ವಿಹಾರದಲ್ಲಿ ಏರ್ಪಡಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.












Click it and Unblock the Notifications