WTC Final: ಮೀಸಲು ದಿನಕ್ಕೆ ಐಪಿಎಲ್ 2023 ಫೈನಲ್: ಭಾರತ ಟೆಸ್ಟ್ ತಂಡಕ್ಕೆ ಸಂಕಷ್ಟ
ಭಾನುವಾರ ನಡೆಯಬೇಕಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಫೈನಲ್ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು, ಸೋಮವಾರಕ್ಕೆ ಮುಂದೂಡಲಾಗಿದೆ. ಪಂದ್ಯ ಮುಂದೂಡಿರುವುದು ಭಾರತ ತಂಡಕ್ಕೆ ಹೊಸ ಸಂಕಷ್ಟ ತಂದೊಡ್ಡಿದೆ.
ಜೂನ್ 7 ರಿಂದ 11 ರವರೆಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಈ ಪ್ರಶಸ್ತಿಗಾಗಿ ಸೆಣೆಸಲಿವೆ. ಇಂಗ್ಲೆಂಡ್‌ನ ಓವಲ್‌ನಲ್ಲಿ ಈ ಪಂದ್ಯ ನಡೆಯಲಿದೆ. ಭಾರತ ತಂಡದ ಆಟಗಾರರು ಈಗಾಗಲೇ ಇಂಗ್ಲೆಂಡ್‌ಗೆ ತೆರಳಿದ್ದು ಅಭ್ಯಾಸ ಆರಂಭಿಸಿದ್ದಾರೆ.

ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಫೈನಲ್‌ನಲ್ಲಿ ಸೆಣೆಸಲಿದ್ದು, ಮೊಹಮ್ಮದ್ ಶಮಿ, ಶುಭಮನ್ ಗಿಲ್ ಮತ್ತು ರವೀಂದ್ರ ಜಡೇಜಾ ಅನಿವಾರ್ಯವಾಗಿ ಭಾರತದಲ್ಲೇ ಉಳಿದುಕೊಳ್ಳಬೇಕಾಗಿದೆ. ಇಂದು ಪಂದ್ಯ ಮುಗಿದ ಬಳಿಕ ಅವರು ಇಂಗ್ಲೆಂಡ್‌ಗೆ ತೆರಳಲಿದ್ದು, ಅಲ್ಲಿನ ಪರಿಸ್ಥಿತಿಗಳಿಗೆ ಹೊಂದಿಕೊಳ್ಳಲು ಕಡಿಮೆ ಸಮಯ ಇರುವುದರಿಂದ ಅವರ ಪ್ರದರ್ಶನದ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದೆ.
ಇದೇ ಮೊದಲ ಬಾರಿಗೆ ಐಪಿಎಲ್ ಫೈನಲ್ ಮೀಸಲು ದಿನಕ್ಕೆ
16 ವರ್ಷಗಳ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೈನಲ್ ಪಂದ್ಯ ಮೀಸಲು ದಿನಕ್ಕೆ ಮುಂದೂಡಲಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ಫೈನಲ್ ನಡೆಯಬೇಕಿತ್ತು. ಆದರೆ ಪಂದ್ಯದ ಆರಂಭಕ್ಕೆ ಮುನ್ನವೇ ಶುರುವಾದ ಮಳೆ ರಾತ್ರಿ 11 ಗಂಟೆಯ ನಂತರವು ನಿಲ್ಲದ ಕಾರಣ ಅನಿವಾರ್ಯವಾಗಿ ಪಂದ್ಯವನ್ನು ರದ್ದು ಮಾಡಿ, ಸೋಮವಾರಕ್ಕೆ ಮುಂದೂಡಲಾಗಿದೆ.
ಇಂದು ಕೂಡ ಮಳೆಯಿಂದಾಗಿ ಪಂದ್ಯ ರದ್ದಾದರೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್ ಟೈಟನ್ಸ್ ತಂಡವನ್ನು ಚಾಂಪಿಯನ್ ಎಂದು ಘೋಷಣೆ ಮಾಡಲಾಗುತ್ತದೆ. ಮಹೇಂದ್ರ ಸಿಂಗ್ ಧೋನಿ ತಮ್ಮ 250 ನೇ ಐಪಿಎಲ್ ಪಂದ್ಯವನ್ನು ಆಡಲು ಸಜ್ಜಾಗಿದ್ದಾರೆ. ಈ ದಾಖಲೆ ಮಾಡಿದ ಮೊದಲ ಆಟಗಾರ ಎನ್ನುವ ಹೆಗ್ಗಳಿಕೆ ಕೂಡ ಅವರದ್ದಾಗಲಿದೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಭಾರತ ಸಿದ್ಧತೆ
ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕಾಗಿ ಸಿದ್ದತೆ ಮಾಡಿಕೊಳ್ಳಲು ಭಾರತ ತಂಡದ ಆಟಗಾರರು ಈಗಾಗಲೇ ಇಂಗ್ಲೆಂಡ್‌ಗೆ ಹೋಗಿದ್ದಾರೆ. ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್ ಕೂಡ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದ ನಂತರ ಇಂಗ್ಲೆಂಡ್‌ಗೆ ಹೋಗಿದ್ದು ಅಭ್ಯಾಸ ಮಾಡುತ್ತಿದ್ದಾರೆ. ನಾಯಕ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಕೂಡ ತಂಡವನ್ನು ಸೇರಿಕೊಂಡಿದ್ದಾರೆ.
ಕಳೆದ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತಿದ್ದ ಭಾರತ, ಈ ಬಾರಿ ಚಾಂಪಿಯನ್ ಆಗುವ ವಿಶ್ವಾಸದಲ್ಲಿದೆ. ಇನ್ನು ಆಸ್ಟ್ರೇಲಿಯಾ ಕೂಡ ಸಕಲ ರೀತಿಯಲ್ಲಿ ಸಜ್ಜಾಗಿದ್ದು, ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಇಶಾನ್ ಕಿಶನ್ (ವಿಕೆಟ್ ಕೀಪರ್).












Click it and Unblock the Notifications