Breaking : ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ವಿರುದ್ಧ ಚಾರ್ಜ್‌ಶೀಟ್
ನವದೆಹಲಿ, ಜುಲೈ 26: ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದೆ.
ಮೇ 31 ರಂದು ಶ್ರೀನಗರದಲ್ಲಿ 84 ವರ್ಷದ ಫಾರೂಕ್ ಅಬ್ದುಲ್ಲಾ ಅವರನ್ನು ಮೂರು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು.ಜೂನ್ 4 ರಂದು ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಮತ್ತು ಇತರರ ವಿರುದ್ಧ ಶ್ರೀನಗರದ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಪಿಎಂಎಲ್‌ಎ 2002 ರ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಅರ್ಜಿಯನ್ನು ಸಲ್ಲಿಸಿದೆ.
ನ್ಯಾಯಾಲಯವು ದೂರನ್ನು ಪರಿಗಣನೆಗೆ ತೆಗೆದುಕೊಂಡಿದ್ದು, ಆಗಸ್ಟ್ 27 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆರೋಪಿಗಳಿಗೆ ನೋಟಿಸ್ ನೀಡಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಫಾರುಕ್ ಅಬ್ದುಲ್ಲಾ ಅವರು ಸಂಘದ ಅಧ್ಯಕ್ಷರಾಗಿ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಈ ಮೂಲಕ ಕ್ರೀಡಾ ಸಂಸ್ಥೆಯಲ್ಲಿ ನೇಮಕಾತಿಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಸೆಪ್ಟೆಂಬರ್ 2019 ರಲ್ಲಿ, ಏಜೆನ್ಸಿ ಜೆಕೆಸಿಎ ಆಗಿನ ಖಜಾಂಚಿ ಅಹ್ಸಾನ್ ಅಹ್ಮದ್ ಮಿರ್ಜಾ ಅವರನ್ನು ಬಂಧಿಸಿತು. ಅವರ ವಿರುದ್ಧ ವಿಚಾರಣೆ ನಡೆಯುತ್ತಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಸಂಸ್ಥೆ ತಿಳಿಸಿದೆ.
ಡಿಸೆಂಬರ್ 2020 ರಲ್ಲಿ, ಏಜೆನ್ಸಿಯು ಇದೇ ಪ್ರಕರಣದಲ್ಲಿ ಫಾರೂಕ್ ಅಬ್ದುಲ್ಲಾ ಅವರ 11.86 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು.
ವಿಧಾನಸಭೆ ಚುನಾವಣೆ ನಡೆಯುವವರೆಗೆ ಕೇಂದ್ರೀಯ ಸಂಸ್ಥೆಗಳು ವಿರೋಧ ಪಕ್ಷದ ನಾಯಕರಿಗೆ ತೊಂದರೆ ನೀಡುತ್ತಲೇ ಇರುತ್ತವೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಪ್ರಕರಣವೇನು...?
ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆಗೆ ಸೇರಿದ ಹಣವನ್ನು ಅಸೋಸಿಯೇಷನ್‌ನ ಪದಾಧಿಕಾರಿಗಳು ಸೇರಿದಂತೆ ವಿವಿಧ ಜನರ ಹಲವು ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ. ಕ್ರಿಕೆಟ್ ಅಸೋಸಿಯೇಷನ್‌ನ ಪದಾಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ ಸಲ್ಲಿಸಿದ ಆರೋಪಪಟ್ಟಿಯ ಆಧಾರದ ಮೇಲೆ ಜಾರಿ ನಿರ್ದೇಶನಾಲಯವು ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಆರಂಭಿಸಿದೆ.













Click it and Unblock the Notifications