ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾಗೆ ಕೊರೊನಾ ಸೋಂಕು
ಶ್ರೀನಗರ, ಮಾರ್ಚ್ 30: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಫಾರೂಕ್ ಅಬ್ದುಲ್ಲಾ ಅವರಿಗೆ ಕೊರೊನಾ ದೃಢಪಟ್ಟಿದ್ದು, ಸಣ್ಣಪುಟ್ಟ ಲಕ್ಷಣಗಳು ಕಂಡು ಬಂದಿವೆ. ಪರೀಕ್ಷೆ ವರದಿ ಬರುವವರೆಗೂ ನಾನು ಮತ್ತು ನಮ್ಮ ಕುಟುಂಬದ ಎಲ್ಲಾ ಸದಸ್ಯರೂ ಐಸೋಲೇಷನ್ ನಲ್ಲಿ ಇರಲಿದ್ದೇವೆ.
ನಮ್ಮೊಂದಿಗೆ ಸಂಪರ್ಕದಲ್ಲಿದ್ದವರು ಕೂಡಲೇ ಪರೀಕ್ಷೆಗೊಳಗಾಗುವಂತೆ ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದು ಪುತ್ರ ಒಮರ್ ಅಬ್ದುಲ್ಲಾ ಮಾಹಿತಿ ನೀಡಿದ್ದಾರೆ. ಈ ಕುರಿತು ಸ್ವತಃ ಫಾರೂಕ್ ಅವರ ಪುತ್ರ ಒಮರ್ ಅಬ್ದುಲ್ಲಾ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಕಳೆದ ಫೆಬ್ರವರಿ ತಿಂಗಳಿನಲ್ಲಿ ಫಾರೂಕ್ ಅಬ್ದುಲ್ಲಾ ಅವರು ಶ್ರೀನಗರದಲ್ಲಿ ಕೊರೊನಾ ಲಸಿಕೆ ಪಡೆದುಕೊಂಡಿದ್ದರು. ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 56,211 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
1,20,95,855 ಮಂದಿ ಒಟ್ಟಾರೆ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 37,028 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 1,13,93,021ಕ್ಕೆ ತಲುಪಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,40,720ಕ್ಕೆ ತಲುಪಿದೆ.












Click it and Unblock the Notifications