Breaking; ಕೇರಳ, ಮಾಸ್ಕ್ ಕಡ್ಡಾಯಗೊಳಿಸಿ ಆದೇಶ
ತಿರುವನಂತಪುರಂ, ಏಪ್ರಿಲ್ 27; ಕೇರಳ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಹೊಸ ಕೋವಿಡ್ ಪ್ರಕರಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ವಿವಿಧ ರಾಜ್ಯಗಳು ಈಗಾಗಲೇ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಿವೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರ ಬುಧವಾರ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಿದೆ. ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ದಂಡ ಪ್ರಯೋಗ ಮಾಡಲಾಗುತ್ತದೆ ಎಂದು ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ರಾಜ್ಯಗಳ ಕೋವಿಡ್ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದರು. ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಿದರು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈಗಾಗಲೇ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಈ ಸಾಲಿಗೆ ಈಗ ಕೇರಳ ಸಹ ಸೇರಿದೆ.

ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್, "ಕೇರಳದಲ್ಲಿ ಕೋವಿಡ್ ಪರಿಸ್ಥಿತಿ ಹತೋಟಿಯಲ್ಲಿದೆ. ವಿವಿಧ ರಾಜ್ಯಗಳಲ್ಲಿ ಕೋವಿಡ್ ಪ್ರಕರಣ ಏರಿಕೆಯಾಗುತ್ತಿದೆ. ಕೇರಳ ಈ ಕುರಿತು ನಿಗಾವಹಿಸಿದೆ" ಎಂದು ಹೇಳಿದ್ದರು.
ಸಚಿವರು ವಿವಿಧ ಜಿಲ್ಲೆಗಳ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದ್ದರು. ಕೊಚ್ಚಿಯಲ್ಲಿ ಮಾತ್ರ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು ತಿಳಿದು ಬಂದಿತ್ತು. ಪ್ರಕರಣಗಳ ಸಂಖ್ಯೆ ಏರಿಕೆಯಾದರೆ ಕ್ಲಸ್ಟರ್ ರಚನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು.
"ತಜ್ಞರು ಮುಂದಿನ ಕೆಲವು ವಾರ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಬಹುದು ಎಂದು ಅಂದಾಜಿಸಿದ್ದಾರೆ. ಎಲ್ಲಾ ಹಿರಿಯ ನಾಗರಿಕರು ಬೂಸ್ಟರ್ ಡೋಸ್ ಲಸಿಕೆ ಪಡೆಯುವಂತೆ ಮನವಿ ಮಾಡಲಾಗಿದೆ. ಈ ಕುರಿತು ಮನೆ-ಮನೆ ಸಮೀಕ್ಷೆ ಸಹ ನಡೆಸಲಾಗುತ್ತದೆ" ಎಂದು ವೀಣಾ ಜಾರ್ಜ್ ಹೇಳಿದ್ದರು.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಭಾರತದಲ್ಲಿ 24 ಗಂಟೆಯಲ್ಲಿ 2,927 ಹೊಸ ಕೋವಿಡ್ ಪ್ರಕರಣ ದಾಖಲಾಗಿವೆ. 2,252 ಜನರು ಗುಣಮುಖಗೊಂಡಿದ್ದಾರೆ. ದೇಶದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 16,279.












Click it and Unblock the Notifications