ನ.16 ರಂದು ಶಬರಿಮಲೆ ದೇವಾಲಯ ಪ್ರವೇಶಿಸಲಿರುವ ತೃಪ್ತಿ ದೇಸಾಯಿ
ತಿರುವನಂತಪುರಂ, ನವೆಂಬರ್ 14: ಸುಪ್ರೀಂ ಕೋರ್ಟ್ ನಲ್ಲಿ ಶಬರಿಮಲೆ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ್ದರ ಕುರಿತು ಪ್ರತಿಕ್ರಿಯೆ ನೀಡಿದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ನವೆಂಬರ್ 16 ರಂದು ದೇವಾಲಯಕ್ಕೆ ತೆರಳುವುದಾಗಿ ಹೇಳಿದ್ದಾರೆ.
ಏಳು ಸದಸ್ಯರ ವಿಸ್ತೃತ ಪೀಠಕ್ಕೆ ಪ್ರಕರಣವನ್ನು ವರ್ಗಾಯಿಸಲಾಗಿದ್ದು, ಅದರ ತೀರ್ಪು ಹೊರಬರುವವರೆಗೂ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಲು ಅವಕಾಶ ನೀಡಬೇಕು ಎಂದು ಅವರು ಹೇಳಿದ್ದಾರೆ.
ಪುಣೆ ಮೂಲದ ಹೋರಾಟಗಾರ್ತಿ ತೃಪ್ತಿ ದೇಸಾಯಿ, ಕಳೆದ ವರ್ಷ ಸುಪ್ರೀಂ ತೀರ್ಪು ಪ್ರಕಟಗೊಂಡಾಗಲೇ ದೇವಾಲಯ ಪ್ರವೇಶಿಸಲು ಪ್ರಯತ್ನಿಸಿದ್ದರು. ಆದರೆ ಅಯ್ಯಪ್ಪ ಭಕ್ತರು ಅದಕ್ಕೆ ಅವಕಾಶ ಮಾಡಿಕೊಟ್ಟಿರಲಿಲ್ಲ. ಇದೀಗ ನ.16 ರಂದು ದೇವಾಲಯಕ್ಕೆ ತೆರಳುವುದಾಗಿ ಅವರು ಹೇಳಿದ್ದಾರೆ.

ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿರಲಿಲ್ಲ. ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬುದು ದೇವಾಲಯದ ಆಡಳಿತ ಮಂಡಳಿಯ ವಾದವಾಗಿತ್ತು. ಆದರೆ 2018 ರ ಸೆಪ್ಟೆಂಬರ್ ನಲ್ಲಿ ಈ ನಿಷೇಧವನ್ನು ತೆರವುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಮಹಿಳೆಯರು ದೇವಾಲಯ ಪ್ರವೇಶಿಸಬಹುದು ಎಂದಿತ್ತು.
ಈ ತೀರ್ಪಿನ ವಿರುದ್ಧ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆಯನ್ನು ಗುರುವಾರ ನಡೆಸಿದ ನ್ಯಾಯಾಲಯ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ಜೊತೆಗೆ ಈಗಾಗಲೇ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ತಕ್ಕಂತೆ ತಡೆ ನೀಡುವುದಿಲ್ಲ ಎಂದಿದೆ.












Click it and Unblock the Notifications