ತುಮಕೂರು : ಲಾರಿ-ಬಸ್ ನಡುವೆ ಡಿಕ್ಕಿ, 8 ಜನರ ಸ್ಥಿತಿ ಗಂಭೀರ
ತುಮಕೂರು, ಮಾ.12 : ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 12 ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಗುರುವಾರ ಮುಂಜಾನೆ ಸಂಭವಿಸಿದ ಈ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ಥೆಗೊಂಡಿದೆ.
ತುಮಕೂರು ನಗರದ ಹೊರವಲಯದ ಬಟವಾಡಿ ಗ್ರಾಮದ ಬಳಿ ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ 12 ಜನರು ಗಾಯಗೊಂಡಿದ್ದು, 8 ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೊಸ ಬಡಾವಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಕ್ರೇನ್ ಮೂಲಕ ಲಾರಿ ಮತ್ತು ಬಸ್ ಅನ್ನು ರಸ್ತೆ ಬದಿಗೆ ನಿಲ್ಲಿಸಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. [ಗೊರವನಹಳ್ಳಿ ಮಹಾಲಕ್ಷ್ಮೀ ದೇವಿ ಪ್ರಸಿದ್ಧಿ ಪಡೆದಿದ್ದು ಹೇಗೆ?]
ಖಾಸಗಿ ಬಸ್ ಚಾಲಕ ನಿದ್ದೆ ಮಂಪರಿನಲ್ಲಿ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಅಪಘಾತದಿಂದಾಗಿ ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಬಸ್ ಮುಂಭಾಗದಲ್ಲಿ ಕುಳಿತಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ. ಹೊಸ ಬಡಾವಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. [ಪೀಣ್ಯ ಬಸ್ ನಿಲ್ದಾಣ ಸ್ಥಳಾಂತರ]












Click it and Unblock the Notifications