ತುಮಕೂರು ರಸ್ತೆ ಅಪಘಾತ ಘಟನೆ: ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರ, ಉಚಿತ ಚಿಕಿತ್ಸೆ
ತುಮಕೂರು ಆಗಸ್ಟ್ 25: ತುಮಕೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಜೊತೆಗೆ ಗಾಯಾಳುಗಳಿಗೆ ಸರ್ಕಾರದ ವತಿಯಿಂದ ಉಚಿತ ಚಿಕಿತ್ಸೆಯನ್ನು ನೀಡುವುದಾಗಿ ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಕ್ರೂಸರ್ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ರಾಯಚೂರಿನ ದಿನಗೂಲಿ ಕಾರ್ಮಿಕರಾಗಿದ್ದು, ಬೆಂಗಳೂರು ಕಡೆಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.
ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರು ರಾಯಚೂರು ಜಿಲ್ಲೆಯವರಾಗಿದ್ದು, ಕ್ರೂಸರ್ ನಲ್ಲಿ 20 ಮಂದಿ ಇದ್ದರೆಂದು ತಿಳಿದು ಬಂದಿದೆ. ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ ಲಾರಿ ಡಿಕ್ಕಿಯಾಗಿದೆ ಎಂದು ಘಟನೆಯಲ್ಲಿ ಬದುಕುಳಿದವರು ತಿಳಿಸಿದ್ದಾರೆ.
ಇನ್ನೂ ತುಮಕೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ಘೋಷಿಸಿದ್ದಾರೆ.

ಬಳಿಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು "ದುಡಿಮೆಗಾಗಿ ಬಂದ ಕೂಲಿ ಕಾರ್ಮಿಕರು ತುಮಕೂರಿನ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅಸುನೀಗಿದ್ದು ನಿಜಕ್ಕೂ ದುರ್ದೈವದ ಸಂಗತಿಯಾಗಿದೆ. ಮೃತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿಗಳು ಪರಿಹಾರ ಘೋಷಿಸಿದ್ದು ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ'' ಎಂದು ಟ್ವೀಟ್ ಮಾಡಿದ್ದಾರೆ.
ಘಟನೆ ಬಗ್ಗೆ ಸಿಎಂ ಟ್ವೀಟ್
'ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ
'ಕರ್ನಾಟಕ ರಾಜ್ಯದ ತುಮಕೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಹಲವರು ಪ್ರಾಣ ಕಳೆದುಕೊಂಡಿರುವುದು ಅತ್ಯಂತ ದುರದೃಷ್ಟಕರ. ಅಗಲಿದವರಿಗೆ ನನ್ನ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.












Click it and Unblock the Notifications