ರಾಜ್ಯದ ಆರ್ಥಿಕತೆ ಬಲಗೊಳ್ಳಲು ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ
ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲ ಜಾತಿ, ಎಲ್ಲ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆಯು ವೇಗ ಪಡೆದುಕೊಂಡಿದೆ ಎಂದು ಸಿದ್ದರಾಮಯ್ಯ ಬೆನ್ನುತಟ್ಟಿಕೊಂಡಿದ್ದಾರೆ. ಇಂದು ತುಮಕೂರು ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ಕಾರದ ಸವಲತ್ತುಗಳ ವಿತರಣೆ, ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಈ ಬಗ್ಗೆ ಮಾತನಾಡಿದ್ದಾರೆ.
ಇಡೀ ದೇಶದಲ್ಲಿ ರಾಜ್ಯದ ಜಿಎಸ್‌ಡಿಪಿ ಮೊದಲ ಸ್ಥಾನದಲ್ಲಿದೆ. ದೇಶದ ಜಿಡಿಪಿ ಬೆಳವಣಿಗೆ ದರ ಇನ್ನೂ 8ರಷ್ಟಿದೆ. ಆದರೆ ರಾಜ್ಯದ ಜಿಎಸ್‌ಡಿಪಿ ಬೆಳವಣಿಗೆ ದರ 10ಕ್ಕೆ ತಲುಪಿದೆ. ವಿದೇಶಿ ಬಂಡವಾಳ ಆಕರ್ಷಣೆ, ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು ಇದು ಸಾಧ್ಯವಾಗಿದ್ದು ರಾಜ್ಯದ ಎಲ್ಲ ಜಾತಿ ಮತ್ತು ಎಲ್ಲ ಧರ್ಮದವರ ಒಟ್ಟಾರೆ ಕೊಡುಗೆಯಿಂದ ಎಂದು ಶ್ಲಾಘಿಸಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಒಂದೂವರೆ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ಇಂದು ನೇರವಾಗಿ ತಲುಪಿವೆ. ಪ್ರತಿ ಜಿಲ್ಲೆಯಲ್ಲೂ ಲಕ್ಷ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ತಲುಪುತ್ತಿವೆ. ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ನಾವು ಕೊಡುತ್ತಲೇ ಹೋಗುತ್ತೇವೆ. ಜೊತೆಗೆ ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆಗಳನ್ನೂ ರೂಪಿಸುತ್ತೇವೆ. ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯನ್ನು ಜಾರಿ ಮಾಡಿದ್ದು ನಮ್ಮ ಸರ್ಕಾರ ಮಾತ್ರ ಎಂದು ಸಮರ್ಥಿಸಿಕೊಂಡಿದ್ದಾರೆ.
ನಮ್ಮ ಸರ್ಕಾರ ಮಹಿಳೆಯರ ಪರವಾದ ಸರ್ಕಾರ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರ, ಹಿಂದುಳಿದವರ, ದಲಿತರ ಪರವಾಗಿರುವ ಸರ್ಕಾರ. ಹಳ್ಳಿಗಳ, ತಾಲ್ಲೂಕುಗಳ, ಜಿಲ್ಲೆಗಳ ಅಭಿವೃದ್ಧಿಯಿಂದ ಮಾತ್ರ ರಾಜ್ಯದ, ದೇಶದ ಅಭಿವೃದ್ಧಿ ಸಾಧ್ಯ ಎನ್ನುವುದು ನಮ್ಮ ನಂಬಿಕೆ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಜಿಎಸ್‌ಡಿಪಿ ಪ್ರಗತಿ ಕಾಣಲು ಸಾಧ್ಯ. ಎಲ್ಲ ಧರ್ಮದ, ಎಲ್ಲ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಜಿಡಿಪಿ ಬೆಳವಣಿಗೆಯಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ಹೀಗಾಗಿ ನಾವು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವಾಗ ಎಲ್ಲ ಜಾತಿ, ಎಲ್ಲ ಧರ್ಮ, ಎಲ್ಲ ವರ್ಗದವರನ್ನೂ ಒಳಗೊಳ್ಳುವಂತೆ ರೂಪಿಸುತ್ತೇವೆ. ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿದ್ದಾಗಿದೆ. ಈ ರೀತಿ ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ಇಂದು ತುಮಕೂರು ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ಕಾರದ ನಾನಾ ಯೋಜನೆಗಳ 23,000ಕ್ಕೂ ಅಧಿಕ ಮಂದಿ ಫಲಾನುಭವಿಗಳಿಗೆ 750 ಕೋಟಿ ರೂಪಾಯಿ ಮೊತ್ತದ ಸವಲತ್ತುಗಳನ್ನು ಸಿಎಂ ಸಿದ್ದರಾಮಯ್ಯ ವಿತರಿಸಿದರು. ಇದೇ ವೇಳೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.
ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ, ಬೈರತಿ ಸುರೇಶ್, ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.












Click it and Unblock the Notifications