Breaking news; ಸಚಿವ ಮಧು ಬಂಗಾರಪ್ಪ ಕಾರು ಅಪಘಾತ
ತುಮಕೂರು, ಡಿಸೆಂಬರ್ 28; ಸೊರಬ ಕ್ಷೇತ್ರದ ಕಾಂಗ್ರೆಸ್ ಶಾಸಕ, ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಕಾರು ಅಪಘಾತವಾಗಿದೆ. ಸಚಿವರು ಅಪಾಯದಿಂದ ಪರಾಗಿದ್ದಾರೆ.
ಶಿವಮೊಗ್ಗದಿಂದ ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಚಿವ ಮಧು ಬಂಗಾರಪ್ಪ ಕಾರು ಅಪಘಾತವಾಗಿದೆ. ಲಾರಿಗೆ ಕಾರು ಡಿಕ್ಕಿ ಹೊಡೆದಿದೆ.

ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು. ಬುಧವಾರ ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು. ಬಳಿಕ ಬೆಂಗಳೂರಿಗೆ ಬರುತ್ತಿದ್ದರು.
ಸಚಿವ ಮಧು ಬಂಗಾರಪ್ಪ ಕಾರು ನಂದಿಹಳ್ಳಿ ಎಂಬಲ್ಲಿ ಟಿಪ್ಪರ್ ಲಾರಿಗೆ ಗುದ್ದಿ ಅಪಘಾತ ಸಂಭವಿಸಿದೆ. ಸಚಿವರು ಅಪಾಯದಿಂದ ಪಾರಾಗಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದೆ.
ಕಾರಿನಲ್ಲಿ ಮೂವರು ಇದ್ದರು ಎಂಬ ಮಾಹಿತಿ ಇದೆ. ಕಾರಿನಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದು, ಅಪಘಾತದ ಬಳಿಕ ಸಚಿವರು ಬೇರೆ ಕಾರಿನಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಸಚಿವರು ಸಭೆ ನಡೆಸಿದ್ದರು; ಸೊರಬ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು. ಬುಧವಾರ ಅವರು ಶಿವಮೊಗ್ಗ ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ್ದರು.
2024ರ ಜನವರಿ 12ರಂದು ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ ಆವರಣದಲ್ಲಿ ಕರ್ನಾಟಕ ಸರ್ಕಾರದ 5ನೇ ಗ್ಯಾರಂಟಿ ಯೋಜನೆಯಾದ 'ಯುವನಿಧಿ' ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಇದರ ಸಿದ್ಧತೆಗಳ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಹಲವು ಸೂಚನೆಗಳನ್ನು ನೀಡಿದ್ದರು.
ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳು ಈಗಾಗಲೇ ಅನುಷ್ಠಾನಗೊಳಿಸಲಾಗಿದೆ. 5ನೇ ಗ್ಯಾರಂಟಿ ಯೋಜನೆಯನ್ನು ಜನವರಿ 12ರಂದು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದರು.
'ಯುವನಿಧಿ' ಯೋಜನೆಯ ರಾಜ್ಯ ಮಟ್ಟದ ಅನುಷ್ಠಾನ ಕಾರ್ಯಕ್ರಮಕ್ಕೆ ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಜನರು ಸೇರುವ ನಿರೀಕ್ಷೆ ಇದೆ. ಇದರ ವ್ಯವಸ್ಥಿತ ಅನುಷ್ಟಾನ, ವೇದಿಕೆ ನಿರ್ಮಾಣ ಮತ್ತು ವಾಹನ ಸಂಚಾರ ದಟ್ಟಣ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮ ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದರು.
ಈ ಸಭೆಗೂ ಮೊದಲು ಸಚಿವ ಮಧು ಬಂಗಾರಪ್ಪ ಕೃಷಿ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಸಿರಿಧಾನ್ಯ ಹಬ್ಬವನ್ನು ಉದ್ಘಾಟಿಸಿದ್ದರು.
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ದೇಶೀಯ ವಿದ್ಯಾಶಾಲಾ ಸಮಿತಿ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಡಿ.ವಿ.ಎಸ್ ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ 2023-24ರ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಿದ್ದರು.
2023ರ ವಿಧಾನಸಭೆ ಚುನಾವಣೆಯಲ್ಲಿ ಸೊರಬ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. 98,912 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ, ಸಹೋದರ ಕುಮಾರ್ ಬಂಗಾರಪ್ಪ ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಶಿಕ್ಷಣ ಇಲಾಖೆ ಸಚಿವರಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದರು. 2013ರ ಚುನಾವಣೆಯಲ್ಲಿ ಸೊರಬದಿಂದ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿದು ಶಾಸಕರಾಗಿ ಆಯ್ಕೆಯಾಗಿದ್ದರು. 2018ರ ಚುನಾವಣೆಯಲ್ಲಿ ಸೋಲು ಕಂಡಿದ್ದರು. 2021ರಲ್ಲಿ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದರು.












Click it and Unblock the Notifications