Tumakuru-Nelamangala National Highway: ನೆಲಮಂಗಲ-ತುಮಕೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಬಿಗ್ ಅಪ್ಡೇಟ್
Tumakuru-Nelamangala National Highway: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಲ್ಲಿ ದೊಡ್ಡ ಕ್ರಾಂತಿಯೇ ಆಗುತ್ತಿದೆ. ಕೆಲವು ಪೂರ್ಣಗೊಳ್ಳುವ ಹಂತದಲ್ಲಿದ್ದರೆ, ಇನ್ನೂ ಕೆಲವು ಅಭಿವೃದ್ಧಿ ಕಾಮಗಾರಿ ಹಂತದಲ್ಲಿವೆ. ಈ ಸಾಲಿಗೆ ತುಮಕೂರು-ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 48 ಇದ್ದು, ಇದು ಯಾವಾಗ ಪೂರ್ಣಗೊಳ್ಳಲಿದೆ ಎನ್ನುವ ಬಿಗ್ ಅಪ್ಡೇಟ್‌ವೊಂದು ಲಭ್ಯವಾಗಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲ ವಿಸ್ತರಣೆಯಾಗುತ್ತಲಿದೆ. ಮತ್ತೊಂದೆಡೆ, ಪ್ರಸ್ತುತ ಇರುವ ಕೆಲ ಹೆದ್ದಾರಿಗಳ ಮೇಲ್ದರ್ಜೆ ಕಾಮಗಾರಿಗಳು ಸಹ ನಡೆಯುತ್ತಿವೆ. ಇದೀಗ ಬಹುಮುಖ್ಯ ಮಾರ್ಗವಾದ ತುಮಕೂರು-ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 48 ಕಾಮಗಾರಿ ಪೂರ್ಣದ ಬಗ್ಗೆ ಸಚಿವ ಡಾ.ಜಿ.ಪರಮೇಶ್ವರ್ ಅವರು ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ.

ಬೆಂಗಳೂರು ಸಮೀಪದಲ್ಲಿರುವ ಕಲ್ಪತರು ನಾಡು ಅಂತಲೇ ಪ್ರಸಿದ್ಧಿ ಪಡೆದಿರುವ ತುಮಕೂರು ನಗರವು ರಾಜ್ಯದ ಪ್ರಮುಖ ಕೈಗಾರಿಕಾ ಹಾಗೂ ಶಿಕ್ಷಣ ಕೇಂದ್ರ ಆಗಿದೆ. ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಪ್ರಮುಖ ಮಾರ್ಗ ಆಗಿದೆ. ಈ ಹಿನ್ನೆಲೆ ನೆಲಮಂಗಲ-ತುಮಕೂರು ಬೈಪಾಸ್ ರಸ್ತೆಯವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 48 ಕಾಮಗಾರಿಯನ್ನು 2026ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕ ಅನೂಪ್ ಶರ್ಮಾ ಅವರಿಗೆ ಸೂಚಿಸಿದರು.
ತುಮಕೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ನೆಲಮಂಗಲ-ತುಮಕೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ 45 ಕಿಲೋ ಮೀಟರ್ ಉದ್ದದ ರಸ್ತೆ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ. ಈ ಕಾಮಗಾರಿಗೆ ವೇಗ ನೀಡಬೇಕು ಎಂದು ಸೂಚನೆ ನೀಡಿದರು.
ತುಮಕೂರು ನಗರ ವ್ಯಾಪ್ತಿಯಲ್ಲಿನ ಸುಮಾರು 19 ಕಿ.ಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿಯು 16 ಹಳ್ಳಿಗಳ ಮೂಲಕ ಹಾದು ಹೋಗಲಿದೆ. ಆದ್ದರಿಂದ ಸ್ಥಳೀಯರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಕಾಮಗಾರಿಯನ್ನು ಕೈಗೊಳ್ಳಬೇಕು ಅಂತಲೂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ, ನಗರದ ಬೆಳಗುಂಬ, ಶ್ರೀದೇವಿ ಕಾಲೇಜು, ಯಲ್ಲಾಪುರ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿರುವ ರಸ್ತೆ ಕೆಳ ಸೇತುವೆಗಳಲ್ಲಿ ಬೆಳಕಿನ ವ್ಯವಸ್ಥೆ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿರು.
ಅಪಘಾತಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ವ್ಯಾಪ್ತಿಯಲ್ಲಿ ಒಟ್ಟು 40 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿದ್ದು, ಬ್ಲಾಕ್ ಸ್ಪಾಟ್ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ, ಎಚ್ಚರಿಕೆ ಫಲಕಗಳು, ಪೇಂಟಿಂಗ್ ಹಾಗೂ ಸುರಕ್ಷತಾ ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕು. ಅಲ್ಲದೆ, ಅಪಘಾತ ನಿಯಂತ್ರಣ ಕ್ರಮಗಳನ್ನು ಕೂಡ ಕೈಗೊಳ್ಳಬೇಕು. ಒಟ್ಟಿನಲ್ಲಿ ನೆಲಮಂಗಲ-ತುಮಕೂರು ರಾಷ್ಟ್ರೀಯ ಹೆದ್ದಾರಿ 48 ಕಾಮಗಾರಿಯು ಗುಣಮಟ್ಟದಿಂದ ಕೂಡಿರಬೇಕು. ಒಂದು ವೇಳೆ ನಿರ್ಲಕ್ಷ್ಯ ಕಂಡುಬಂದರೆ, ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಕಾಮಗಾರಿ ಕುರಿತಂತೆ ವರದಿಯನ್ನು ಕೂಡ ತಿಳಿಸಬೇಕೆಂದು ಸೂಚನೆ ನೀಡಿದರು. ಇನ್ನೂ ಈ ಮಾರ್ಗದಲ್ಲಿ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಸಂಚಾರ ಮಾಡುತ್ತವೆ. ಕಾಮಗಾರಿ ಆಮೆಗತಿಯಲ್ಲಿ ಸಾಗಿರುವ ಕಾರಣ ವಾಹನ ಸವಾರರಿಗೆ ಕಿರಿಕಿರಿ ಉಂಟಾದಂತಾಗಿದೆ. ಪ್ರತಿನಿತ್ಯವೂ ಸಹ ಇದರಿಂದ ಸಮಸ್ಯೆ ಅನುಭವಿಸುವಂತಾಗಿದೆ ಎಂದು ವಾಹನ ಸವಾರರು ಆರೋಪ ಮಾಡುತ್ತಲೇ ಬಂದಿದ್ದರು. ಇದೀಗ ಈ ಬಗ್ಗೆ ಗಮನಹರಿಸಿರುವ ಸಚಿವರು ಕಾಮಗಾರಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.












Click it and Unblock the Notifications