ಮಠಾಧೀಶರ ಜೊತೆ ಜೆಪಿ ನಡ್ಡಾ ಸಭೆ: ಕೇಂದ್ರ ನಾಯಕರ ಮುಂದೆ ಕರಾವಳಿ ಸ್ವಾಮೀಜಿಗಳು ಇಟ್ಟ ಬೇಡಿಕೆಗಳೇನು?
ಉಡುಪಿ, ಫೆಬ್ರವರಿ 20: ಕರ್ನಾಟಕ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸೋಮವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಳಿಕ ಅವರು ಪೇಜಾವರ ಮಠಕ್ಕೆ ತೆರಳಿದ್ದಾರೆ. ಪೇಜಾವರ ಮಠದಲ್ಲಿ ಜೆಪಿ ನಡ್ಡಾ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.
ಪೇಜಾವರ ಮಠಕ್ಕೆ ಭೇಟಿ ನೀಡಿದ ಜೆಪಿ ನಡ್ಡಾ ವಿಶ್ವೇಶತೀರ್ಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ್ದಾರೆ. ಬಳಿಕ ಮಠದ ರಾಮ ವಿಠಲ ಸಭಾಭವನದಲ್ಲಿ ವಿವಿಧ ಮಠಾಧೀಶರ ಜೊತೆ ಸಮಾಲೋಚನೆ ಆರಂಭಿಸಿದ್ದಾರೆ. ಹಿಂದುತ್ವ, ಅಭಿವೃದ್ಧಿ ಕಾರ್ಯ, ಕುರಿತಂತೆ ವಿವಿಧ ವಿಚಾರಗಳ ಬಗ್ಗೆ ಮಠಾಧೀಶರ ಜೊತೆ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಕರಾವಳಿಯ ಸ್ವಾಮೀಜಿಗಳುಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸಮ್ಮುಖದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಸರ್ಕಾರಗಳು ಹಾಗೂ ಜನಪ್ರನಿಧಿಗಳು ಸನಾತನ ಧರ್ಮ ಸಂಸ್ಕೃತಿ ಸದ್ವಿಚಾರಗಳಿಗೆ ಸದಾ ಮನ್ನಣೆ ನೀಡಬೇಕು. ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಅಭಿವೃದ್ಧಿ ಹೆಸರಿನಲ್ಲಿ ಕರಾವಳಿಯ ಸಮೃದ್ಧ ಪ್ರಾಕೃತಿಕ ಮತ್ತು ಸಾಂಸ್ಕೃತಿಕ ಧಾರ್ಮಿಕ ಸಂಪನ್ಮೂಲಗಳಿಗೆ ಹಾನಿಯಾಗಬಾರದು
ಉದ್ಯಮದ, ಕರಾವಳಿ ಪ್ರಗತಿಗೆ ಯೋಜನೆಗಳನ್ನು ಅನುಷ್ಠಾನಿಸಬೇಕು. ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿಸುವ ಮೂಲಕ ಕರಾವಳಿ ಯುವಕರ ವಲಸೆಯನ್ನು ತಪ್ಪಿಸಬೇಕು ಎಂದು ಸ್ವಾಮೀಜಿಗಳು ಮನವಿ ಮಾಡಿದ್ದಾರೆ.

ಇನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತುಳು ಭಾಷೆಗೆ ಸೂಕ್ತ ಮಾನ್ಯತೆ ನೀಡಬೇಕು. ದೇಶ ದ್ರೋಹಿ ಮತ್ತು ಉಗ್ರವಾದಿ ಚಟುವಟಿಕೆಗಳನ್ನು ಮಟ್ಟಹಾಕಬೇಕು. ಕರಾವಳಿ ಮಲೆನಾಡು ಜಿಲ್ಲೆಗಳನ್ನು ಕೇಂದ್ರವಾಗಿಟ್ಟುಕೊಂಡು ರಾಷ್ಟ್ರೀಯ ತನಿಖಾ ದಳದ ವಿಭಾಗವನ್ನು ಶೀಘ್ರ ಆರಂಭಿಸಬೇಕು.ಗೋಹತ್ಯೆ ನಿಷೇಧ ಕಾನೂನುನನ್ನು ಸಮರ್ಪಕವಾಗಿ ಜಾರಿಗೆ ತರಬೇಕು. ಗೋ ಸಂರಕ್ಷಣೆಗೆ ಪೂರಕ ಯೋಜನೆಗಳಿಗೆ ನೆರವು ನೀಡಬೇಕು. ದೇವಸ್ಥಾನಗಳ ಭೂಮಿ ಅತಿಕ್ರಮಣ ತಡೆಗಟ್ಟಲು ಕ್ರಮಕೈಗೊಳ್ಳಬೇಕು, ರಾಜ್ಯಕ್ಕೆ ಭ್ರಷ್ಟಾಚಾರ ಮುಕ್ತ , ಸ್ವಚ್ಛ , ಪಾರದರ್ಶಕ ಆಡಳಿತ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಈ ವೇಳೆ ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಸಿ ಸಿ.ಟಿ.ರವಿ, ಸಚಿವ ಸುನೀಲ್ ಕುಮಾರ್ ಉಪಸ್ಥಿತರಿದ್ದರು.












Click it and Unblock the Notifications