ಉಡುಪಿ; ಭಾರೀ ಮಳೆ, ವಿದ್ಯಾರ್ಥಿಗಳು, ಜನರಿಗೆ ಮುಂಜಾಗೃತಾ ಸೂಚನೆಗಳು
ಉಡುಪಿ, ಜುಲೈ 05; ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಮಳೆ ಅಬ್ಬರಿಸುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗೃತಾ ಕ್ರಮ ಕೈಗೊಳ್ಳುವ ಕುರಿತು ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದೆ.
ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ದಿನಾಂಕ 23/05/2023ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ನಿರ್ಣಯ, ಹವಾಮಾನ ಇಲಾಖೆಯ ಇ-ಮೇಲ್ ಸಂದೇಶ ದಿನಾಂಕ 04/07/2023 ಉಲ್ಲೇಖಿಸಿ ಅಧಿಕೃತ ಜ್ಞಾಪನಾ ಪತ್ರವನ್ನು ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆಯು ಮುಂದುವರಿಯುವ ಮುನ್ಸೂಚನೆ ಹವಮಾನ ಇಲಾಖೆ ನೀಡಿರುವುದರಿಂದ ಸ್ಥಳೀಯ ಮಳೆಯ ಪ್ರಮಾಣ, ವಿಪತ್ತು ಪರಿಸ್ಥಿತಿಯನ್ನು ಅದರಿಸಿ ಅವಶ್ಯವಿರುವ ಕಡೆಗಳಲ್ಲಿ ಮುಂಜಾಗೃತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಅವಶ್ಯವನಿಸಿದ ಶಿಕ್ಷಣ ಸಂಸ್ಥೆಗಳಿಗೆ (ವಿವತ್ತು ನಿರ್ವಹಣಾ-2005 ಕಾಯ್ದೆ ಕಲಂ 26, 30 ಮತ್ತು 34ರಡಿ) ರಜೆಯನ್ನು ಘೋಷಿಸುವ ಕುರಿತು ಕ್ರಮವಹಿಸುವಂತೆ ತಾಲೂಕು ತಹಶೀಲ್ದಾರರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶಿಸಲಾಗಿರುತ್ತದೆ.
ಅವಶ್ಯಕ ಸಂದರ್ಭಗಳಲ್ಲಿ ನೀಡಲ್ಪಡುವ ರಜೆಗಳಿಗೆ ಸಂಬಂಧಿಸಿದಂತೆ ಘಟನೋತ್ತರ ಮಂಜೂರಾತಿಗಾಗಿ ಕಛೇರಿಗೆ ಸಲ್ಲಿಸುವುದು. ಉಳಿದಂತೆ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಅಂಶಗಳನ್ನು ಪರಿಗಣಿಸಿ ನಿರ್ಣಯಿಸುವಂತೆ ಸಂಸ್ಥೆಯ ಮುಖ್ಯಸ್ತರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಹೇಳಿದೆ.
ಸೂಚನೆಗಳು;
* ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.
* ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ.
* ದುರ್ಬಲ/ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪವಚನಗಳಿಗೆ ಬಳಸುವಂತಿಲ್ಲ.
* ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ನೆರೆ ಪೀಡಿತರಾಗಿದ್ದು ಬರುವುದು ಕಷ್ಟಸಾಧ್ಯ ಎನ್ನುವ ಸಂದರ್ಭಗಳಲ್ಲಿ ಸ್ಥಳೀಯವಾಗಿ ರಜೆಯನ್ನು ಘೋಷಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
* ಈಗ ಮಳೆಗಾಗಿ, ಮಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯವನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತ ತಿಳಿಸಿದೆ.
* ಮಕ್ಕಳ ಪೋಷಕರು/ ಶಾಲಾ ಮುಖ್ಯಸ್ತರ, ಮಕ್ಕಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು.
* ಮಕ್ಕಳು ಶಾಲೆಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.
* ಶಾಲೆಗಳಲ್ಲಿ ಪಾಕೃತಿಕ ವಿಕೋಪ ವಿಭಾಯಿಸುವ ಬಗ್ಗೆ ಮಕ್ಕಳಿಗೆ ಮಾಹಿತಿಯನ್ನು ನೀಡುವುದು.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ
24*7 1077/0820-2574802.
ಹವಾಮಾನ ಮುನ್ಸೂಚನೆ; ಜುಲೈ 4ರಂದು ಉಡುಪಿ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹವಾಮಾನ ಮಾಹಿತಿ ಪ್ರಕಾರ ಜುಲೈ 5ರಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 6, 8 ಮತ್ತು 9ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 7ರಂದು ಆರೆಂಜ್ ಅಲರ್ಟ್ ನೀಡಲಾಗಿದೆ.
ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ. ಮೀ. ಇಂದ 55 ಕಿ. ಮೀ. ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಸಮುದ್ರದಲ್ಲಿ 3.5 ರಿಂದ 4.1 ಮೀ ಎತ್ತರದ ಅಲೆಗಳು ಬರುವ ಸಾಧ್ಯತೆ ಇದೆ.
ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಜುಲೈ 10ರ ತನಕ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications