Contractor Santosh Patil Suicide : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ: ಸಚಿವ ಈಶ್ವರಪ್ಪ ಪ್ರತಿಕ್ರಿಯೆ
ಉಡುಪಿ, ಏಪ್ರಿಲ್ 12: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿ ನಾಪತ್ತೆಯಾಗಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಇದೀಗ ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧದ ಆರೋಪಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ.
ಉಡುಪಿಯ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ ಸಮೀಪದ ಶಾಂಭವಿ ಲಾಡ್ಜ್‌ನಲ್ಲಿ ಸಂತೋಷ್ ಆತ್ಮಹತ್ಯೆಗೆ ಶರಣಾಗಿದ್ದು, ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಡೆತ್ ನೋಟ್ ಬರೆದಿದ್ದರು.
ಇನ್ನು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ, "ಸಂತೋಷ್ ಪಾಟೀಲ ಆತ್ಮಹತ್ಯೆ ಮಾಡಿಕೊಂಡಿದ್ದಾರಾ? ಯಾಕೆ?," ಎಂದು ಮರುಪ್ರಶ್ನಿಸಿದರು.

"ಅವರು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ನನಗೆ ಗೊತ್ತಿಲ್ಲ. ಅವರು ನನ್ನ ಮೇಲೆ ಕಮಿಷನ್ ಆರೋಪ ಮಾಡಿದ್ದರು. ಯಾಕೆ ಆರೋಪ ಮಾಡಿದ್ದೆ ಎಂದು ಕೇಳುವುದಕ್ಕೆ ಇಂದು ಅವರೇ ಇಲ್ಲ. ಸಂತೋಷ್ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೆ. ಕೋರ್ಟ್ ಕೂಡಾ ವಿಚಾರಣೆ ಅಂಗೀಕರಿಸಿತ್ತು," ಎಂದು ಪ್ರತಿಕ್ರಿಯಿಸಿದರು.
"ಈ ವಿಚಾರವಾಗಿ ನಾವು ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದೇವೆ. ಆತನ ಮೇಲೆ ಮತ್ತು ಒಂದು ಖಾಸಗಿ ಚಾನೆಲ್ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ನ್ಯಾಯಾಲಯದಿಂದ ಸಂತೋಷ್ ಪಾಟೀಲ್‌ಗೆ ನೋಟಿಸ್ ಹೋಗಿದೆ. ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು," ಎಂದರು.
ಕಾಂಗ್ರೆಸ್ ರಾಜೀನಾಮೆ ನೀಡುವಂತೆ ಆಗ್ರಹಿಸಿರುವ ಕುರಿತು ಉತ್ತರಿಸಿ, "ಆತ ನಮ್ಮ ಇಲಾಖೆಯಿಂದ ಯಾವುದೇ ಟೆಂಡರ್ ಪಡೆದುಕೊಂಡಿಲ್ಲ. ನಾನು ರಾಜೀನಾಮೆ ನೀಡುವುದಿಲ್ಲ. ತನಿಖೆ ನಡೆಯಲಿ. ನನ್ನ ಮೇಲೆ ಆರೋಪ ಮಾಡಿದವರು ನ್ಯಾಯಾಲಯದಲ್ಲಿ ಸಾಬೀತು ಮಾಡಬೇಕಿತ್ತು. ಹಾಗಾಗಿ ಆತ್ಮಹತ್ಯೆಗೂ ನನಗೂ ಸಂಬಂಧವಿಲ್ಲ," ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777












Click it and Unblock the Notifications