ಉಡುಪಿ; ಮುಂಗಾರು ಎದುರಿಸಲು ಸಜ್ಜು, ಸಹಾಯವಾಣಿ ಸ್ಥಾಪನೆ
ಉಡುಪಿ, ಮೇ 26; ಈ ವರ್ಷದ ನೈಋತ್ಯ ಮುಂಗಾರು ಮಳೆ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಜಿಲ್ಲಾಡಳಿತಗಳು ಮಳೆ, ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ಉಡುಪಿ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ.
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮುಂಗಾರು ಮಳೆ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಮುಂಜಾಗ್ರತಾ ಹಾಗೂ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಸಾರ್ವಜನಿಕರು ಮುಂಗಾರು ಮಳೆಯ ಸಂದರ್ಭದಲ್ಲಿ ಯಾವುದೇ ಅನಾನುಕೂಲವಾದಲ್ಲಿ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆ 1077ಕ್ಕೆ ಕರೆ ಮಾಡಬಹುದಾಗಿದೆ.

ಉಡುಪಿ ನಗರಸಭೆಯ ಸಹಾಯವಾಣಿ ಸಂಖ್ಯೆ 0820-2520306. ಮೆಸ್ಕಾಂ ಸಹಾಯವಾಣಿ ಸಂಖ್ಯೆ 1912, ನಗರಸಭೆ ಪೌರಾಯುಕ್ತ ರಮೇಶ್ ಪಿ. ನಾಯ್ಕ್ ಮೊಬೈಲ್ ನಂಬರರ್ 9448120430, ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಯಶವಂತ ಪ್ರಭು ಮೊಬೈಲ್ ನಂಬರ್ 9743412642 ಮತ್ತು 6362351481.
ನಗರಸಭೆಯ ಪರಿಸರ ಅಭಿಯಂತರರ ಮೊಬೈಲ್ ನಂಬರ್ 9164397765 ಹಾಗೂ ನಗರಸಭೆಯ ಕಂದಾಯ ಅಧಿಕಾರಿ ಸಂತೋಷ ಡಿ. ಮೊಬೈಲ್ ನಂಬರ್ 9449747209 ಅನ್ನು 24*7 ಸಂಪರ್ಕಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ಹೇಳಿದೆ.

ಮಳೆ ಹಾನಿಯ ಬಗ್ಗೆ ಸಭೆ; ಉಡುಪಿ ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ಮಳೆ, ಗಾಳಿ, ಕಡಲ್ಕೊರೆತ ಸೇರಿದಂತೆ ಪ್ರಾಕೃತಿಕ ವಿಕೋಪಗಳಿಂದ ಸಂಭವಿಸಬಹುದಾದ ಹಾನಿಗಳನ್ನು ತಡೆಗಟ್ಟಲು ತೆಗೆದುಕೊಳ್ಳಬಹುದಾದ ಮುಂಜಾಗೃತ ಕ್ರಮಗಳ ಕುರಿತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಉಡುಪಿ ತಾಲೂಕು ತಹಶೀಲ್ದಾರ್ ರವಿ ಎಸ್. ಅಂಗಡಿ ಈಗಾಗಲೇ ಸಭೆ ನಡೆಸಿದ್ದಾರೆ.
ಈ ಸಭೆಯಲ್ಲಿ ನಗರಸಭೆ ಪೌರಾಯುಕ್ತ ಆರ್. ಪಿ. ನಾಯ್ಕ್, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್, ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ದಿವಾಕರ್ ಖಾರ್ವಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ರಾಜ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಿರಿಯ ಭೂ ವಿಜ್ಞಾನಿ ಅಶ್ವಿನಿ, ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಜಯ ಮುಂತಾದವರು ಪಾಲ್ಗೊಂಡಿದ್ದರು.
ಮೀನುಗಾರಿಕೆ ನಿಷೇಧ; ಉಡುಪಿ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯು ಮುಂಗಾರು ಆರಂಭದ ಅವಧಿಯಲ್ಲಿ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಆದರೆ ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಮೀನುಗಾರಿಕೆ ನಿಷೇಧದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಮನವಿ ಮಾಡಿದ್ದಾರೆ.
ಪ್ರವಾಸಿ ಬೋಟ್ ಸ್ಥಗಿತ; ಉಡುಪಿ ಜಿಲ್ಲೆಯ ಮಲ್ಪೆ ಬಂದರು ವ್ಯಾಪ್ತಿಯ ಮಲ್ಪೆ ಬೀಚ್ ಹಾಗೂ ಸೀವಾಕ್ ಪ್ರದೇಶಗಳಲ್ಲಿ ಪ್ರವಾಸಿ ಬೋಟ್ ಚಟುವಟಿಕೆ ಮತ್ತು ಸೈಂಟ್ ಮೇರೀಸ್ ದ್ವೀಪಕ್ಕೆ ತೆರಳುವ ಪ್ರವಾಸಿ ಬೋಟ್ ಚಟುವಟಿಕೆಗಳನ್ನು ಹಾರ್ಬರ್ ಕ್ರಾಫ್ಟ್ ನಿಯಮಗಳ ಅನ್ವಯ ಮೇ 16 ರಿಂದ ಸೆಪ್ಟಂಬರ್ 15ರ ವರೆಗೆ ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿಗಳು ಕೋರಿದ್ದಾರೆ.












Click it and Unblock the Notifications