20ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರಿಂದ ರಾಜೀನಾಮೆ ಸಲ್ಲಿಕೆ
ಉಡುಪಿ ಮೇ 05: ಕುಂದಾಪುರ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಕಾರ್ಯ ವೈಖರಿಯಿಂದ ಮನನೊಂದು ಕುಂದಾಪುರ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಉದಯ ಕುಮಾರ್ ಪೂಜಾರಿ, ಮಡಾಮಕ್ಕಿ ಗ್ರಾಪಂ ಅಧ್ಯಕ್ಷ ರಾಜೀವ ಕುಲಾಲ್ ಸಹಿತ 20ಕ್ಕೂ ಅಧಿಕ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಿದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಳ್ವೆ, ಮಡಾಮಕ್ಕಿ ಪರಿಸರದ 20 ಅಧಿಕ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರ್ ನವೀನ್ ಶೆಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.
ಇದನ್ನು ಸ್ವೀಕರಿಸಿದ ನವೀನ್ ಶೆಟ್ಟಿ, ಈ ಬಗ್ಗೆ ಜಿಲ್ಲಾಧ್ಯಕ್ಷರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉದಯ ಕುಮಾರ್ ಪೂಜಾರಿ, ಇತ್ತೀಚಿನ ದಿನಗಳಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಕಾರ್ಯವೈಖರಿ ಮತ್ತು ಅಭಿವೃದ್ಧಿ ಶೂನ್ಯ.

ಶಾಸಕರಿಗೆ ಈ ಬಾರಿಯ ಚುನಾವಣೆಯಲ್ಲಿ ಪಕ್ಷ ಮತ್ತೆ ಟಿಕೆಟ್ ನೀಡಿರುವುದು ನಮಗೆ ನೋವಾಗಿದೆ. ಆದುದರಿಂದ ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಕೆಲಸ ಮಾಡಲು ನಮಗೆ ಸಾಧ್ಯವಿಲ್ಲ. ಅದಕ್ಕಾಗಿ ನಾವೆಲ್ಲ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇವೆ ಎಂದರು.
ಕಳೆದ 18 ವರ್ಷಗಳಿಂದ ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರ ಕ್ಷೇತ್ರದ ಶಾಸಕರಾಗಿದ್ದಾರೆ. ಆದರೆ ಕ್ಷೇತ್ರದ ಅಭಿವೃದ್ಧಿ ಮಾತ್ರ ಸಂಪೂರ್ಣ ಕುಂಠಿತ ವಾಗಿದೆ. ಇವರು ಯಾವುದೇ ಕೆಲಸ ಮಾಡುವುದಿಲ್ಲ. ವಿಧಾನಸಭೆಯಲ್ಲಿ ಕ್ಷೇತ್ರದ ಸಮಸ್ಯೆ ಬಗ್ಗೆ ಮಾತನಾಡುವುದಿಲ್ಲ. ಹೀಗಿರುವಾಗ ಬಿಜೆಪಿಯವರು ಅವರಿಗೆ ಮತ್ತೆ ಟಿಕೆಟ್ ನೀಡಿದ್ದಾರೆ.
ಇವರಿಂದ ಈ ಕ್ಷೇತ್ರದ ಅಭಿವೃದ್ಧಿ ಆಗುವುದಿಲ್ಲ ಎಂದು ಅವರು ದೂರಿದರು. ಕಳೆದ ಬಾರಿ ಪಕ್ಷೇತರರಾಗಿ ಆಯ್ಕೆಯಾದ ಇವರು ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಹೊರಿಸಿ ಮೊಕದ್ದಮೆ ಹೂಡಿದ್ದಾರೆ. ಈ ಮೂಲಕ ಬಿಜೆಪಿ ಕಾರ್ಯಕರ್ತರಿಗೆ ಅನ್ಯಾಯ ಮಾಡಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ಏನು ಮಾಡಬೇಕೆಂಬುದರ ಬಗ್ಗೆ ನಾವೆಲ್ಲ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಈ ಬಾರಿಯ ಚುನಾವಣೆಯಲ್ಲಿ ನಾವೆಲ್ಲ ತಟಸ್ಥರಾಗಿ ಇರುತ್ತೇವೆ ಎಂದರು.












Click it and Unblock the Notifications