ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಜೆಡಿಎಸ್ ನಿಂದ ಪ್ರಮೋದ್ ಮಧ್ವರಾಜ್ ಸ್ಪರ್ಧೆ?
ಉಡುಪಿ, ಮಾರ್ಚ್ 19: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ರಾಜಕೀಯ ಪಡಸಾಲೆಯಲ್ಲಿ ಮಹತ್ವದ ಬೆಳವಣಿಗೆಯೊಂದರ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರಕಾರದ ಸೀಟು ಹಂಚಿಕೆಯಲ್ಲಿ ಜೆಡಿಎಸ್ ಗೆ ಬಿಟ್ಟುಕೊಡಲಾದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಲಾಗಿದೆ.
ಈ ನಡುವೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಜೆಡಿಎಸ್ ಸೇರ್ಪಡೆಗೆ ತೆರೆಮರೆಯಲ್ಲಿ ಪ್ರಯತ್ನ ನಡೆಯುತ್ತಿದೆ ಎಂದು ಹೇಳಲಾಗಿದೆ. ಈ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ನಿನ್ನೆ ತನಕ ಕಾಂಗ್ರೆಸ್ ನ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಮೋದ್ ದಿಢೀರ್ ಅಂತ ಮಾಜಿ ಪ್ರಧಾನಿ ದೇವೇಗೌಡ ಮತ್ತು ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಜೆಡಿಎಸ್ ನಲ್ಲಿ ಅವಕಾಶ ಕೊಟ್ಟರೆ ಸ್ಪರ್ಧಿಸುವುದಾಗಿ ಜೆಡಿಎಸ್ ವರಿಷ್ಠರ ಬಳಿ ಪ್ರಮೋದ್ ಮಧ್ವರಾಜ್ ಮನವಿ ಮಾಡಿಕೊಂಡಿದ್ದು, ನಾಳೆಯೊಳಗೆ ಅಂತಿಮ ನಿರ್ಧಾರ ಹೊರಬೀಳಲಿದೆ ಎಂದು ಹೇಳಲಾಗಿದೆ.
ಈ ಅನಿರೀಕ್ಷಿತ ಬೆಳವಣಿಗೆಗೆ ಕಾಂಗ್ರೆಸ್‌ನಲ್ಲಿ ಗೊಂದಲ ಮನೆ ಮಾಡಿದೆ. ಪ್ರಮೋದ್ ಮಧ್ವರಾಜ್ ಜೆಡಿಎಸ್ ಕದ ತಟ್ಟುತ್ತಿರುವುದಕ್ಕೆ ಕೆಲ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಉಡುಪಿ ಜೆಡಿಎಸ್ ವಲಯದಲ್ಲಿ ಪ್ರಮೋದ್ ಮಧ್ವರಾಜ್ ಸ್ಪರ್ಧೆಗೆ ಬೆಂಬಲ ವ್ಯಕ್ತವಾಗಿದೆ ಎಂದು ಹೇಳಲಾಗಿದೆ.












Click it and Unblock the Notifications