ಉಡುಪಿ ಡಿಸಿ, ಎಸಿ ಕೊಲೆ ಯತ್ನ, ಬಂಧಿತರ ಸಂಖ್ಯೆ 13ಕ್ಕೆ ಏರಿಕೆ
ಉಡುಪಿ ಜಿಲ್ಲಾಧಿಕಾರಿ ಮತ್ತು ಸಹಾಯಕ ಆಯುಕ್ತರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಒಟ್ಟು 13 ಆರೋಪಿಗಳನ್ನು ಬಂಧಿಸಿದ್ದಾರೆ.
ಉಡುಪಿ, ಎಪ್ರಿಲ್ 3: ಉಡುಪಿ ಜಿಲ್ಲಾಧಿಕಾರಿ ಮತ್ತು ಸಹಾಯಕ ಆಯುಕ್ತರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಒಟ್ಟು 13 ಆರೋಪಿಗಳನ್ನು ಬಂಧಿಸಿದ್ದಾರೆ.
ನಿನ್ನೆಯಷ್ಟೇ 7ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇಂದು ಮತ್ತೆ 6 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಡಿಸಿ ಹಾಗೂ ಎಸಿ ಮೇಲೆ ಹಲ್ಲೆಗೆ ಯತ್ನಿಸಿದ್ದರು.

ಕಂಡ್ಲೂರಿನಲ್ಲಿ ಕೊಲೆ ಮಾಡಲು ಯತ್ನಿಸಿದ 7 ಆರೋಪಿಗಳನ್ನು ಬಂಧಿಸಲಾಗಿದೆ. ಅವರಲ್ಲಿ ಒಬ್ಬನಿಗೆ ಬೆರಳು ತುಂಡಾಗಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು, ಹಳ್ನಾಡಿಯಲ್ಲಿ ಅಕ್ರಮ ಮರಳುಗಾರಿಕೆ ಆರೋಪದಡಿ 6 ಆರೋಪಿಗಳನ್ನು ಬಂಧಿಸಲಾಗಿದೆ. ಹೀಗೆ ಒಟ್ಟು ಬಂಧಿತ ಆರೋಪಿಗಳ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಆರೋಪಿಗಳ ವಿರುದ್ದ ಕರ್ತವ್ಯಕ್ಕೆ ಅಡ್ಡಿ, ಬೆದರಿಕೆ, ಕೊಲೆ ಯತ್ನ, ಹಲ್ಲೆ ಸೇರಿದಂತೆ ಅನೇಕ ಪ್ರಕರಣ ದಾಖಲಿಸಲಾಗಿದೆ ಎಂದು ಉಡುಪಿ ಎಸ್ಪಿ ಕೆ.ಟಿ. ಬಾಲಕೃಷ್ಣ ತಿಳಿಸಿದ್ದಾರೆ.
ಅಕ್ರಮ ಮರಳುಗಾರಿಕೆಯನ್ನು ತಡೆಯಲು ಸೋಮವಾರ ಮಧ್ಯರಾತ್ರಿ ಕಾರ್ಯಾಚರಣೆಗೆ ಸ್ಥಳಕ್ಕೆ ತೆರಳಿದ್ದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಕುಂದಾಪುರ ಸಹಾಯಕ ಆಯುಕ್ತೆ ಶಿಲ್ಪಾ ನಾಗ್ ಹಾಗೂ ಗ್ರಾಮ ಲೆಕ್ಕಿಗರನ್ನು ಕೊಲೆ ಮಾಡಲು ಯತ್ನಿಸಲಾಗಿತ್ತು.
ಮನವಿ ಸಲ್ಲಿಕೆ :
ಇದೇ ವೇಳೆ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾ ಎಸ್ಪಿ ಕೆ.ಟಿ ಬಾಲಕೃಷ್ಣ ರಿಗೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ.
ಹಲ್ಲೆ ನಡೆಸಿದ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು. ಅಕ್ರಮ ಮರಳುಗಾರಿಕೆ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸರಕಾರವೇ ಈ ಘಟನೆಗೆ ಪರೋಕ್ಷ ಕಾರಣ ಎಂದು ಸಂಘಟನೆಯ ಮುಖಂಡರ ಆರೋಪಿಸಿದ್ದಾರೆ.
(ಚಿತ್ರ ಕೃಪೆ: ದಿನೇಶ್ ಕಿಣಿ, ಫೇಸ್ಬುಕ್)











Click it and Unblock the Notifications