ಉಡುಪಿಯಲ್ಲಿ ಭಾರೀ ಮಳೆ: ಜನರಿಗೆ ಜಿಲ್ಲಾಡಳಿತದ ಸೂಚನೆಗಳು
ಉಡುಪಿ, ಜುಲೈ 16: ನೈಋತ್ಯ ಮುಂಗಾರು ಮಳೆ ಉಡುಪಿ ಜಿಲ್ಲೆಯಲ್ಲಿ ಅಬ್ಬರಿಸುತ್ತಿದೆ. ಜಿಲ್ಲೆಯಾದ್ಯಂತ ಮಂಗಳವಾರ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಈ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಉಡುಪಿ ಜಿಲ್ಲೆ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚಿಸಿರುತ್ತಾರೆ.

ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಅನೇಕ ಸೂಚನೆಗಳನ್ನು ನೀಡಿದೆ. ಮೀನಿಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದ್ದು, ಜುಲೈ 19ರ ತನಕ ಮಳೆ ಮುಂದುವರೆಯುವ ಮುನ್ಸೂಚನೆ ನೀಡಿಲಾಗಿದೆ.
ಜನರಿಗೆ ಸೂಚನೆಗಳು
* ಜಿಲ್ಲಾ/ ತಾಲೂಕು ಮಟ್ಟದ ಅಧಿಕಾರಿಗಳು/ ನಿಯೋಜನೆಗೊಂಡ ಅಧಿಕಾರಿಗಳು/ ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು/ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ನಿಭಾಯಿಸುವುದು. ಪ್ರವಾಸಿಗರು/ ಸಾರ್ವಜನಿಕರು/ ಮೀನುಗಾರರು ನದಿ/ ಜಲಪಾತ್ರ/ ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು.
* ಈ ಸಂದರ್ಭದಲ್ಲಿ ಮಕ್ಕಳು/ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು.
* ದುರ್ಬಲವಾದ/ ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ/ ಮರಗಳ ಕೆಳಗೆ ನಿಲ್ಲಬಾರದು.
* ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶೀತಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಾಂಪೌಂಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ವಾಸಿಸುವುದು, ಅಗತ್ಯವಿದ್ಯಲ್ಲಿ ಈಗಾಗಲೇ ಸಂಬಂಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಕಾಳಜಿ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆದುಕೊಳ್ಳುವುದು.
* ಸಾರ್ವಜನಿಕರಿಗೆ ಈ ಮೇಲಿನ ಅಂಶಗಳಂತೆ ಶೀತಲಾವಸ್ಥೆಯಿರುವ ಅಥವಾ ಕುಸಿತದ ಹಂತದ ಕಾಂಪೌಂಡ್ ಅಥವಾ ಮನೆಯ ಗೋಡೆ ಕಂಡುಬಂದಲ್ಲಿ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವುದು.
* ಮೇಲಿನ ಅಂಶಗಳನ್ನು ಮಳಗಾಲದ ಎಲ್ಲಾ ಸಂದರ್ಭಗಳಲ್ಲಿ ಚಾಚುತಪ್ಪದೇ ಕಡ್ಡಾಯವಾಗಿ ಪಾಲಿಸುವುದು.
ತುರ್ತುಸೇವೆಗೆ ಶುಲ್ಕ ರಹಿತ ಸಂಖ್ಯೆ 1077, ದೂರವಾಣಿ ಸಂಖ್ಯೆ 0820-2574802.
ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಹಲವು ಅನಾಹುತಗಳನ್ನು ಸೃಷ್ಟಿಸಿದೆ. ಸುಮಾರು 10 ಮನೆಗಳಿಗೆ ಹಾನಿಯಾಗಿದ್ದು, ಸುಮಾರು 3.84 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 68.9 ಮಿ. ಮೀ. ಮಳೆಯಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.
ಆಗುಂಬೆ-ಹೆಬ್ರಿ ಸಂಪರ್ಕಿಸುವ ಸೀತಾನದಿ ಬಳಿ ನದಿ ಉಕ್ಕಿ ಹರಿಯುತ್ತಿದ್ದು, ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಭಾನುವಾರ, ಸೋಮವಾರ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಜುಲೈ 16ರಂದು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಎರಡು ದಿನಗಳಿಂದ ಸುರಿದ ಗಾಳಿ, ಮಳೆಗೆ 155 ವಿದ್ಯುತ್ ಕಂಬಗಳು ಬಿದ್ದಿವೆ. ಉಡುಪಿ ನಗರ, ಗ್ರಾಮಾಂತರ ಭಾಗದಲ್ಲಿ ಹಲವು ಕಡೆ ವಿದ್ಯುತ್ ಪೂರೈಕೆ ಸ್ಥಗಿತವಾಗಿದೆ. 6 ಟ್ರಾನ್ಸ್ ಫಾರ್ಮರ್‌ಗಳಿಗೆ ಹಾನಿಯಾಗಿದ್ದು, 25.42 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ನಿರ್ವಹಣೆ, ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳು ಹೇಳಿದ್ದಾರೆ.












Click it and Unblock the Notifications