ಯತ್ನಾಳ ರಾಜಿನಾಮೆ ನೀಡಿದ್ದ ಸ್ಥಾನಕ್ಕೆ ಜಿದ್ದಾಜಿದ್ದಿ: ಸೆ.6ಕ್ಕೆ ಮತದಾನ
ಬೆಂಗಳೂರು, ಆಗಸ್ಟ್ 7: ವಿಜಯಪುರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ಆಯ್ಕೆಯಾಗುವ ವಿಧಾನಪರಿಷತ್ ಸದಸ್ಯರ ಚುನಾವಣೆ ಸೆಪ್ಟೆಂಬರ್ 6ರಂದು ನಡೆಯಲಿದೆ. ಈ ಕ್ಷೇತ್ರದಲ್ಲಿ ಪರಿಷತ್ ಸದಸ್ಯರಾಗಿದ್ದ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ವೇಳೆ ವಿಜಯಪುರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.
ಅವರ ರಾಜಿನಾಮೆಯಿಂದ ಪರಿಷತ್ ಸ್ಥಾನ ತೆರವುಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಕೇಂದ್ರ ಚುನಾವಣಾ ಆಯೋಗ ವಿಧಾನಪರಿಷತ್ ಸದಸ್ಯತ್ವಕ್ಕೆ ಚುನಾವಣೆ ಘೋಷಿಸಿದೆ. ಆಗಸ್ಟ್ 13ರಂದು ಅಧಿಸೂಚನೆ ಹೊರಬೀಳಲಿದೆ.
2015ರಲ್ಲಿ ವಿಜಯಪುರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಬಿಜೆಪಿಯ ಅಧಿಕೃತ ಅಭ್ಯರ್ಥಿ ಜಿ.ಎಸ್. ನ್ಯಾಮಗೌರ ವಿರುದ್ಧ ಯತ್ನಾಳ್ ಬಂಡಾಯ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ಪಕ್ಷದ ಸೂಚನೆಯನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅವರನ್ನು ಉಚ್ಛಾಟಿಸಲಾಗಿತ್ತು.

ಆದರೆ ಇತ್ತೀಚಿನ ವಿಧಾನಸಭಾ ಚುನಾವಣೆಗೂ ಮುನ್ನ ಯತ್ನಾಳ್ ಮತ್ತೆ ಬಿಜೆಪಿ ಸೇರಿ ಶಾಸಕರಾಗಿ ಆಯ್ಕೆಯಾದರು. ಹಾಗಾಗಿ ಈ ಕ್ಷೇತ್ರ ಉಳಿಸಿಕೊಳ್ಳುವುದು ಬಿಜೆಪಿ ಮತ್ತು ಯತ್ನಾಳ್‌ಗೆ ಪರೀಕ್ಷೇಯಾಗಿತ್ತು. ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಿರುವುದರಿಂದ ಈ ಚುನಾವಣೆಯಲ್ಲಿ ಮೈತ್ರಿ ಏರ್ಪಟ್ಟರೆ ಜೆಡಿಎಸ್ ಇಲ್ಲವೇ ಕಾಂಗ್ರೆಸ್ ಅಭ್ಯರ್ಥಿ ಮಾತ್ರ ಕಣಕ್ಕಿಳಿಯಬಹುದು. ಆಗ ಬಿಜೆಪಿ ಹಾಗೂ ಸಮ್ಮಿಶ್ರ ಸರ್ಕಾರದ ಅಭ್ಯರ್ಥಿ ನಡುವೆ ಪ್ರಬಲ ಸ್ಪರ್ಧೆ ನಡೆಯಲಿದೆ.
ಆ.20 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ, ಆಗಸ್ಟ್ 21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ, ಆಗಸ್ಟ್ 23ರಂದು ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿರುತ್ತದೆ, ಸೆಪ್ಟೆಂಬರ್ 6ರಂದು ಮತದಾನ ನಡೆಯಲಿದ್ದು, ಸೆಪ್ಟೆಂಬರ್ 11ರಂದು ಫಲಿತಾಂಶ ಹೊರಬೀಳಲಿದೆ.












Click it and Unblock the Notifications