Vijayapura Private Jet Crash: ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ಜೆಟ್ ವಿಮಾನ ಪತನ
Vijayapura Private Jet Crash: ಇತ್ತೀಚಿನ ದಿನಗಳಲ್ಲಿ ವಿಮಾನ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ನಡುವೆಯೇ, ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ಘಟನೆ ಸಂಭವಿಸಿದೆ. ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದ ಸಮೀಪ ಖಾಸಗಿ ಜೆಟ್ ವಿಮಾನವೊಂದು ಪತನಗೊಂಡಿದ್ದು, ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿವೆ.
ಮಾಹಿತಿಯ ಪ್ರಕಾರ, ವಿಮಾನವು ತಾಂತ್ರಿಕ ದೋಷದ ಕಾರಣ ಪತನಗೊಂಡಿರಬಹುದು ಎಂದು ಶಂಕಿಸಲಾಗಿದೆ. ಗಾಯಗೊಂಡಿರುವ ಇಬ್ಬರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.

ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ: ರೆಡ್ ಬರ್ಡ್ ಕಂಪನಿಗೆ ಸೇರಿರುವ ವಿಮಾನವು ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ವೇಳೆ ತಾಂತ್ರಿಕ ಸಮಸ್ಯೆ ಹಿನ್ನೆಲೆ ರೈತರ ಜಮೀನಿನಲ್ಲಿ ಪತನವಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ವಿಮಾನದಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ವಿಮಾನದಲ್ಲಿ ಇದ್ದವರು ಯಾರು?: ಈ ವಿಮಾನವನ್ನು ರೆಡ್ ಬರ್ಡ್ ಎವಿಯೇಷನ್ ಸಂಸ್ಥೆ ತರಬೇತಿ ಉದ್ದೇಶಕ್ಕಾಗಿ ಬಳಸುತ್ತಿದ್ದು, ಸೆಸ್ನಾ 172 ಮಾದರಿಯ ಲಘು ವಿಮಾನದಲ್ಲಿ ಕ್ಯಾಪ್ಟನ್ ಕುನಾಲ್ ಮಲ್ಹೋತ್ತಾ ಹಾಗೂ ತರಬೇತಿ ಪಡೆಯುತ್ತಿದ್ದ ಪೈಲಟ್ ಕುನಾಲ್ ಶಂಕರ್ ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಿಕ್ಕು ಬದಲಿಸಿದ ಹೆಲಿಕಾಪ್ಟರ್: ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಇಳಿಯಬೇಕಾದ ಜಾಗದಲ್ಲಿ ಇಳಿಯದೇ ಮತ್ತೊಂದು ಜಾಗದಲ್ಲಿ ಲ್ಯಾಂಡ್ ಆದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ನಡೆದಿದೆ. ಇದು ಗೊಂದಲಕ್ಕೆ ಕಾರಣವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ನಿಗದಿತ ಹೆಲಿಪ್ಯಾಡ್‌ನಲ್ಲಿ ಇಳಿಯದೆ, ಮತ್ತೊಂದು ಹೆಲಿಪ್ಯಾಡ್‌ನಲ್ಲಿ ಲ್ಯಾಂಡ್ ಆದ ಘಟನೆ ನಡೆದಿದೆ. ಈ ಬೆಳವಣಿಗೆಯಿಂದ ಸಿಎಂ ಸ್ವಾಗತಕ್ಕೆ ಕಾದಿದ್ದ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ಗೊಂದಲಕ್ಕೆ ಒಳಗಾದರು.
ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪೂರ ಅವರ ಮೊಮ್ಮಗನ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದರು. ಈ ಹಿನ್ನೆಲೆ ರಾಯಚೂರು ರಸ್ತೆಯ ಶ್ರೀನಿವಾಸ್ ಲೇಔಟ್‌ನಲ್ಲಿ ಸಿಎಂ, ಡಿಸಿಎಂ ಹಾಗೂ ಸಚಿವರಿಗಾಗಿ ವಿಶೇಷವಾಗಿ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು. ಆದರೆ, ಹೆಲಿಕಾಪ್ಟರ್ ದಿಕ್ಕು ತಪ್ಪಿ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರ ಖಾಸಗಿ ಹೆಲಿಪ್ಯಾಡ್‌ನಲ್ಲಿ ಇಳಿದಿದೆ ಎಂದು ತಿಳಿದುಬಂದಿದೆ.
ಹೆಲಿಕಾಪ್ಟರ್ ಮತ್ತೊಂದು ಹೆಲಿಪ್ಯಾಡ್‌ನಲ್ಲಿ ಇಳಿದ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹ ಅದೇ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ್ದರಿಂದ, ಅವರು ಇಳಿದ ಹೆಲಿಪ್ಯಾಡ್‌ನಲ್ಲೇ ಸಿಎಂ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಿತ್ತು ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬರಬೇಕಿದ್ದು, ಇದನ್ನು ತಾಂತ್ರಿಕ ದೋಷ ಎಂದು ಅಂದಾಜಿಸಲಾಗಿದೆ.












Click it and Unblock the Notifications