ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈರಮುಡಿ ನಾರಾಯಣನ ವಜ್ರಖಚಿತ ಕಿರೀಟ

By * ಬಿಎಂ ಲವಕುಮಾರ್, ಮೈಸೂರು
|
Google Oneindia Kannada News

ಚೆಲುವರಾಯಸ್ವಾಮಿಯ ವೈರಮುಡಿಯ ಬ್ರಹ್ಮೋತ್ಸವವು ಪ್ರತಿ ವರ್ಷವೂ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ನಡೆಯುತ್ತದೆ. (ಪ್ರಸಕ್ತ ಏಪ್ರಿಲ್ 1ರಂದು ವೈರಮುಡಿ ಉತ್ಸವ ನಡೆಯಲಿದ್ದು, ಏಪ್ರಿಲ್ 4ರಂದು ರಥೋತ್ಸವ ನಡೆಯಲಿದೆ.) ವೈರಮುಡಿ ಎಂಬುವುದು ವಜ್ರ ಖಚಿತ ಕಿರೀಟವಾಗಿದ್ದು, ಇದು ಶ್ರೀಮಾನ್ ನಾರಾಯಣನ ಕಿರೀಟವೆಂದೂ ದ್ವಾಪರಯುಗದಲ್ಲಿ ಕೃಷ್ಣನ ಮೂಲಕ ಚೆಲುವರಾಯನಿಗೆ ಗರುಡನಿಂದ ತೊಡಿಸಲಾಯಿತು ಎಂಬುವುದು ಒಂದೆಡೆಯಾದರೆ, ಮತ್ತೊಂದೆಡೆ ವೈಕುಂಠದಿಂದ ರಾಕ್ಷಸ ವಿರೋಚನ ಕದ್ದಿದ್ದ ನಾರಾಯಣನ ಕಿರೀಟವನ್ನು ಗರುಡ ರಾಕ್ಷಸನೊಂದಿಗೆ ಹೋರಾಡಿ ಮರಳಿ ತಂದು ಚೆಲುವರಾಯನಿಗೆ ಅರ್ಪಿಸಿದನೆಂಬುದು ಜನವಲಯದಲ್ಲಿರುವ ನಂಬಿಕೆಯಾಗಿದೆ.

ಇದನ್ನು ಚೆಲುವರಾಯಸ್ವಾಮಿಗೆ ತೊಡಿಸುವ ಸಂದರ್ಭ ನಡೆಯುವ ಉತ್ಸವವೇ ವೈರಮುಡಿ ಬ್ರಹ್ಮೋತ್ಸವವಾಗಿದೆ. ಇದು ಹೇಗೆ ಆಚರಣೆಗೆ ಬಂತೆಂಬುವುದರ ಬಗ್ಗೆ ಪುರಾಣದ ಕಥೆಯೊಂದು ಪ್ರಚಲಿತದಲ್ಲಿರುವದನ್ನು ನಾವು ಕಾಣಬಹುದು. ಅದು ತ್ರೇತಾಯುಗದ ದಿನಗಳು. ಅಯೋಧ್ಯೆಯಲ್ಲಿ ದಶರಥ ಮಹಾರಾಜ ತನ್ನ ಮಾನಸ ಪುತ್ರ ಶ್ರೀರಾಮಚಂದ್ರನಿಗೆ ಪಟ್ಟಾಭಿಷೇಕ ಮಾಡಲು ನಿರ್ಧರಿಸಿ, ಪಾಲ್ಗುಣ ಮಾಸದ ಪುಷ್ಯ ನಕ್ಷತ್ರದ ಶುಭದಿನವನ್ನು ಗೊತ್ತು ಮಾಡಿ ಅರಮನೆಯಲ್ಲಿ ಪಟ್ಟಾಭಿಷೇಕಕ್ಕೆ ಬೇಕಾದ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿದ್ದನು. ಇನ್ನೇನು ಪಟ್ಟಾಭಿಷೇಕ ನಡೆಯಬೇಕೆನ್ನುವಷ್ಟರಲ್ಲಿ ಕೈಕೇಯಿಯ ಕುತಂತ್ರದಿಂದಾಗಿ ಶ್ರೀರಾಮ ವನವಾಸಕ್ಕೆ ತೆರಳಬೇಕಾಯಿತು. ಆದರೆ ತನ್ನ ಅಣ್ಣ ಶ್ರೀರಾಮನ ಪಟ್ಟಾಭಿಷೇಕವನ್ನು ಕಣ್ಣಾರೆ ನೋಡಬೇಕೆನ್ನುವ ಬಯಕೆಯಲ್ಲಿದ್ದ ಸೋದರ ಲಕ್ಷಣನಿಗೆ ತನ್ನ ಆಸೆ ಈಡೇರಲಿಲ್ಲವಲ್ಲ ಎಂಬ ಕೊರಗು ಸದಾ ಕಾಡುತ್ತಿತ್ತು.

ಆದರೆ ತನ್ನ ಬಯಕೆಯನ್ನು ಈಡೇರಿಸಿಕೊಳ್ಳುವ ಸಲುವಾಗಿ ಆದಿಶೇಷನ ಅವತಾರವಾಗಿದ್ದ ಲಕ್ಷ್ಮಣ ಮುಂದೆ ಕಲಿಯುಗದಲ್ಲಿ ರಾಮಾನುಜರಾಗಿ ಜನಿಸಿ, ಶ್ರೀರಾಮನ ಆರಾಧ್ಯದೈವ ಚೆಲುವರಾಯಸ್ವಾಮಿ ನೆಲೆಸಿದ ಮೇಲುಕೋಟೆಯಲ್ಲಿ ಶ್ರೀರಾಮನ ಪಟ್ಟಾಭಿಷೇಕಕ್ಕೆ ನಿಗದಿಪಡಿಸಿದ ಫಾಲ್ಗುಣ ಮಾಸದ ಪುಷ್ಯ ನಕ್ಷತ್ರದ ಶುಭದಿನದಂದೇ ಚೆಲುವರಾಯಸ್ವಾಮಿಗೆ ವೈರಮುಡಿ ಕಿರೀಟ ಧರಿಸುವ ಮೂಲಕ ತನ್ನ ಮನದ ಇಚ್ಛೆಯನ್ನು ನೆರವೇರಿಸಿಕೊಂಡನಂತೆ ಈ ಸುದಿನವನ್ನು ಪ್ರತಿವರ್ಷವೂ ವೈರಮುಡಿ ಬ್ರಹ್ಮೋತ್ಸವವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. [ಗ್ಯಾಲರಿ ನೋಡಿರಿ]

ಮೈಸೂರು ರಾಜರ ಆಡಳಿತದಲ್ಲಿ ವೈರಮುಡಿ ಕಿರೀಟ ರಾಜಾಶ್ರಯದಲ್ಲಿತ್ತಾದರೂ ಬಳಿಕ ಸರ್ಕಾರದ ವಶಕ್ಕೆ ಹಸ್ತಾಂತರಿಸಲಾಯಿತು. ಈಗ ಮಂಡ್ಯದ ಸರ್ಕಾರಿ ಖಜಾನೆಯಲ್ಲಿದ್ದು, ಉತ್ಸವದ ಸಂದರ್ಭ ವೈರಮುಡಿ, ರಾಜಮುಡಿ ಕಿರೀಟವನ್ನು ಬಿಗಿ ಭದ್ರತೆಯಲ್ಲಿ ಮೇಲುಕೋಟೆಗೆ ತರಲಾಗುತ್ತದೆಯಲ್ಲದೆ, ಬಳಿಕ ದ್ವಾರದ ಹನುಮಂತನ ಗುಡಿಯ ಬಳಿಯಿಂದ ಬೆಳ್ಳಿ ಪಲ್ಲಕಿಯಲ್ಲಿರಿಸಿ ಪೂಜಿಸಿ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತದೆ.

ವೈರಮುಡಿ ಬ್ರಹ್ಮೋತ್ಸವ ಸಂದರ್ಭ ಚೆಲುವರಾಯಸ್ವಾಮಿಗೆ ವೈರಮುಡಿ ಕಿರೀಟ ಮಾತ್ರವಲ್ಲದೆ, ಮೈಸೂರು ಅರಸರಾದ ರಾಜ ಒಡೆಯರ್ ಅರ್ಪಿಸಿದ ರಾಜಮುಡಿಯಲ್ಲದೆ, ಗಂಡಭೇರುಂಡ ಪದಕ, ಶಂಖ, ಚಕ್ರ, ಗದೆ, ಪದ್ಮಪೀಠ, ಕರ್ಣಕುಂಡಲ ಸೇರಿದಂತೆ 14 ಆಭರಣಗಳನ್ನು ತೊಡಿಸಲಾಗುತ್ತದೆ.

English summary
Melukote Cheluvanarayana Swamy Vairamudi utsav is on April 1, 2012. Thousands of devotees gather from all over India and world to have a glimpse of beautiful festival and beautiful place. Article by BM Lavakumar, Mysore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X