ಮಡಿಕೇರಿ: ಹೋಂ-ಸ್ಟೇಗಳ ಮಾಲೀಕರಿಗೆ ಜಿಲ್ಲಾಡಳಿತದ ಖಡಕ್ ಎಚ್ಚರಿಕೆ
ಮಡಿಕೇರಿ, ಮಾರ್ಚ್ 22: ಕೊಡಗು ಜಿಲ್ಲೆಯಲ್ಲಿ ಪ್ರವಾಸಿ ಸ್ಥಳ, ಹೋಂ-ಸ್ಟೇ ಹಾಗೂ ಹೋಟೆಲ್‍ಗಳು ಸೇರಿದಂತೆ ಎಲ್ಲಾ ಕಡೆ ಪ್ರವಾಸಿಗರ ಸುರಕ್ಷತೆ ಮತ್ತು ರಕ್ಷಣೆಗೆ ಒತ್ತು ನೀಡಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಇದುವರೆಗೂ ನೋಂದಣಿ ಆಗದಿರುವ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಣಿ ಆಗಬೇಕು ಎಂದು ಜಿಲ್ಲಾಡಳಿತ ಖಡಕ್ ಸೂಚನೆ ನೀಡಿದ್ದು, ಮತ್ತೊಮ್ಮೆ ನೋಂದಣಿಗೆ ಅವಕಾಶವನ್ನು ನೀಡಿದೆ.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಅನಿತಾ ಭಾಸ್ಕರ್ ಈ ಕುರಿತು ಹೋಂ-ಸ್ಟೇಗಳ ಮಾಲೀಕರಿಗೆ ಸೂಚನೆಗಳನ್ನು ನೀಡಿದ್ದಾರೆ. ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿರುವುದಿಲ್ಲ ಎಂದು ಹೇಳಿದ್ದಾರೆ.

ನೋಂದಣಿಗೆ ಮತ್ತೆ ಅವಕಾಶ: ಹೋಂ-ಸ್ಟೇಗಳ ನೋಂದಣಿಯನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹಾಗೆಯೇ ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಯಾಗದೆ ನಿಯಮ ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಪರವಾನಿಗೆ ಪಡೆದು ಕಾರ್ಯ ನಿರ್ವಹಿಸುತ್ತಿರುವ ಮತ್ತು ಪರವಾನಿಗೆ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿರುವ ಹೋಂ-ಸ್ಟೇಗಳು ಪರವಾನಿಗೆಯನ್ನು ನವೀಕರಿಸುವಂತೆ ತಿಳಿಸಿದ್ದಾರೆ. ಹೋಂ-ಸ್ಟೇಗಳ ನೋಂದಣಿಗಾಗಿ ಪ್ರವಾಸೋದ್ಯಮ ಇಲಾಖೆಯು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ವೆಬ್‌ಸೈಟ್ ಮೂಲಕ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಲು ಮತ್ತೆ ಅವಕಾಶ ನೀಡಲಾಗಿದೆ.
ಹೋಂ-ಸ್ಟೇ ಪರಿವೀಕ್ಷಣೆಗಾಗಿ ಅಧಿಕಾರಿಗಳು ಭೇಟಿ ನೀಡಿದಾಗ ಹೋಂ-ಸ್ಟೇ ಪ್ರಮಾಣಪತ್ರ ಅಥವಾ ಹೋಂ-ಸ್ಟೇ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿಯನ್ನು ಹಾಜರುಪಡಿಸಬೇಕು. ಇಲ್ಲವಾದಲ್ಲಿ ಹೋಂ-ಸ್ಟೇ ಜಾಗದ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ಮಾಹಿತಿ ಇಲ್ಲದೆ ಅನಧೀಕೃತವಾಗಿ ನಡೆಸುತ್ತಿರುವಂತಹ ಹೋಂ-ಸ್ಟೇಗಳ ಬಗ್ಗೆ ಸಾರ್ವಜನಿಕರು ದೂರು/ ಮಾಹಿತಿ ನೀಡಬಹುದಾಗಿದೆ. ಇಂತಹ ವಿವರಗಳನ್ನು ಪತ್ರದ ಮೂಲಕ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ಇವರಿಗೆ ಕಳಿಸಬಹುದು. ಅಥವ ದೂರವಾಣಿ ಸಂಖ್ಯೆ 08272-200519 ಅಥವಾ ಈ-ಮೇಲ್ [email protected] ಮೂಲಕವೂ ತಿಳಿಸಬಹುದು.
ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್, ಟೂರ್ಸ್ ಅಂಡ್ ಟ್ರಾವೆಲ್ ಏಜೆನ್ಸಿ ಹಾಗೂ ಮನರಂಜನಾ ಪಾರ್ಕ್‍ಗಳ ಉದ್ದಿಮೆದಾರರುಗಳು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‍ಸೈಟ್‌ನಲ್ಲಿ ತಮ್ಮ ಸಂಸ್ಥೆಯನ್ನು ನೋಂದಣಿ ಮಾಡುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ಹೇಳಿದ್ದಾರೆ.
ಕಳೆದ ವಾರ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆ ನಿರ್ವಹಿಸುವ ಕುರಿತು ಜಿಲ್ಲೆಯ ಹೋಟೆಲ್, ರೆಸಾರ್ಟ್, ಹೋಂ-ಸ್ಟೇ ಹಾಗೂ ಟ್ರಾವೆಲ್ಸ್ ಏಜೆನ್ಸಿ ಸಂಸ್ಥೆಯ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ್ದರು.
ಜಿಲ್ಲೆಯ ಪ್ರವಾಸಿ ಸ್ಥಳ, ಹೋಂಸ್ಟೇ ಹಾಗೂ ಹೋಟೆಲ್‍ಗಳು ಸೇರಿದಂತೆ ಎಲ್ಲೆಡೆ ಪ್ರವಾಸಿಗರ ಸುರಕ್ಷತೆ ಮತ್ತು ರಕ್ಷಣೆಗೆ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇದುವರೆಗೆ ನೋಂದಣಿ ಆಗದಿರುವ ಹೋಂಸ್ಟೇಗಳು ಕಡ್ಡಾಯವಾಗಿ ನೋಂದಣಿ ಆಗಬೇಕು ಎಂದು ಸೂಚನೆ ಕೊಟ್ಟಿದ್ದರು.












Click it and Unblock the Notifications