ಕೊಪ್ಪಳ: ಪ್ರವಾಸಿಗರೇ ಯಾವುದೇ ಭಯ ಬೇಡ, ಗುಡ್ ನ್ಯೂಸ್ ಕೊಟ್ಟ ಜಿಲ್ಲಾಡಳಿತ
ಕೊಪ್ಪಳ, ಮಾರ್ಚ್ 17: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಒಬ್ಬರನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣದ ಬಳಿಕ ವಿಶ್ವವಿಖ್ಯಾತ ಹಂಪಿ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ. ಕೊಪ್ಪಳ ಜಿಲ್ಲಾಡಳಿತ ಸರ್ಕಾರದ ನಿರ್ದೇಶನದನ್ವಯ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಇದಕ್ಕಾಗಿ ಮಾಹಿತಿ ಕೇಂದ್ರವನ್ನು ಸಹ ತೆರೆಯಲಾಗಿದೆ.
ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಈ ಕುರಿತು ಮಾಹಿತಿ ನೀಡಿದ್ದಾರೆ, "ಕೊಪ್ಪಳ ಜಿಲ್ಲೆಯ ಪ್ರವಾಸಿ ತಾಣಗಳ ಭೇಟಿ ನೀಡುವ ಪ್ರವಾಸಿಗರಿಗೆ ಮಾಹಿತಿ, ಸುರಕ್ಷತೆ ಹಾಗೂ ಭದ್ರತೆ ಹಿತದೃಷ್ಟಿಯಿಂದ ಪ್ರವಾಸಿ ಮಾಹಿತಿ ಕೇಂದ್ರ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ" ಎಂದು ಹೇಳಿದ್ದಾರೆ.

ಜಿಲ್ಲೆ ಐತಿಹಾಸಿಕ ಪ್ರೇಕ್ಷಣಿಯ ಸ್ಥಳಗಳನ್ನು ಹೊಂದಿದೆ. ದೇಶ ಹಾಗೂ ವಿದೇಶದ ಹಲವಾರು ಪ್ರವಾಸಿಗರು ಜಿಲ್ಲೆಗೆ ಭೇಟಿ ನೀಡುತ್ತಾರೆ. ಪ್ರವಾಸಿಗರಿಗೆ ಮಾಹಿತಿ ನೀಡಲು, ಸುರಕ್ಷತೆ, ಜಾಗೃತಿ ಕಲ್ಪಿಸಲು ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಒಂದು ಪ್ರವಾಸಿ ಮಾಹಿತಿ ಕೇಂದ್ರವನ್ನು ಆರಂಭಿಸಲಾಗಿದೆ.
ವಿವಿಧ ಇಲಾಖೆಗಳ ಸಹಯೋಗ: ಈ ಮಾಹಿತಿ ಕೇಂದ್ರ ವಿವಿಧ ಇಲಾಖೆಗಳ ಸಹಯೋಗವನ್ನು ಒಳಗೊಂಡಿದೆ. ಆರೋಗ್ಯ, ಪೊಲೀಸ್, ಅಗ್ನಿಶಾಮಕ, ಅರಣ್ಯ, ಅಬಕಾರಿ, ಪ್ರವಾಸೋದ್ಯಮ, ಪುರಾತತ್ವ ಇಲಾಖೆಯ ಅಧಿಕಾರಿ/ ಸಿಬ್ಬಂದಿಗಳನ್ನು ಈ ಕೇಂದ್ರಕ್ಕೆ ನಿಯೋಜಿಸಲಾಗಿದೆ. ಪ್ರತಿದಿನ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಈ ಕೇಂದ್ರ ಕಾರ್ಯ ನಿರ್ವಹಣೆ ಮಾಡಲಿದೆ.
ಕೊಪ್ಪಳ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಆರೋಗ್ಯ, ಪ್ರವಾಸಿ ತಾಣ, ವಿಪತ್ತುಗಳಂತಹ ಇತರ ಅವಶ್ಯಕ ಮತ್ತು ತುರ್ತು ಸಂದರ್ಭದಲ್ಲಿ ನಿಖರವಾದ ಮತ್ತು ಸೂಕ್ತವಾದ ಮಾಹಿತಿಯನ್ನು ಒದಗಿಸಲು ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ.
ಈ ಅಧಿಕಾರಿ/ ಸಿಬ್ಬಂದಿ ವರ್ಗದವರು ಪ್ರತಿದಿನ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಸಹಾಯವಾಣಿ ಕೇಂದ್ರದಲ್ಲಿ ಕರ್ತವ್ಯವನ್ನು ನಿರ್ವಹಣೆ ಮಾಡಲಿದ್ದಾರೆ. ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ತಮಗೆ ಬೇಕಾದ ಅಗತ್ಯ ಸಲಹೆ ಹಾಗೂ ಮಾಹಿತಿಯನ್ನು ಪಡೆಯಲು ಈ ಕೇಂದ್ರ ನೆರವಾಗಲಿದೆ.
ಕೊಪ್ಪಳ ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಸಹಾಯವಾಣಿ ಸಂಖ್ಯೆ 08539-225311 ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ. ಮಾರ್ಚ್ 11ರಿಂದಲೇ ಈ ಸಹಾಯವಾಣಿ ಕಾರ್ಯ ನಿರ್ವಹಣೆ ಮಾಡುತ್ತಿದ್ದು, ಪ್ರವಾಸಿಗರಿಗೆ ಅಗತ್ಯ ಮಾಹಿತಿಯನ್ನು ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕೊಪ್ಪಳದ ಘಟನೆ ಬಳಿಕ ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆಯೊಂದನ್ನು ಹೊರಡಿಸಿದ್ದರು. ಈ ಘಟನೆಯು ಅತ್ಯಂತ ದುಃಖಕರ, ಹಾಗೂ ವಿಷಾದನೀಯವಾದುದಾಗಿದೆ. ಈ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ಈ ರೀತಿಯ ದುರ್ಘಟನೆಗಳು ನಡೆಯದ ರೀತಿಯಲ್ಲಿ ಕೆಳಕಂಡ ಸೂಚನೆಗಳನ್ನು ಹಾಗೂ ನಿರ್ದೇಶನಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದರು.
* ರಾಜ್ಯದ ಪ್ರವಾಸಿ ತಾಣಗಳಲ್ಲಿನ ಹೋಮ್‌ಸ್ಟೇಗಳು ವಿದೇಶಿ ಪ್ರವಾಸಿಗರನ್ನು ಒಳಗೊಂಡಂತೆ ಎಲ್ಲಾ ಪ್ರವಾಸಿಗರ ಭದ್ರತೆ ಹಾಗೂ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳತಕ್ಕದ್ದು.
* ಹೊರವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವ ಮುಂಚಿತವಾಗಿ ಸಂಬಂಧಿಸಿದ ಅಧಿಕಾರ ವ್ಯಾಪ್ತಿಯುಳ್ಳ ಪೊಲೀಸ್ ಠಾಣೆಯಲ್ಲಿ ಮಾಹಿತಿಯನ್ನು ನೀಡಿ, ಅನುಮತಿ ಪಡೆಯತಕ್ಕದ್ದು.
* ಪೊಲೀಸರಿಂದ/ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಪೂರ್ವಾನುಮತಿಯನ್ನು ಪಡೆಯದೇ ನಿರ್ಜನ ಪ್ರದೇಶ/ ಹೊರವಲಯ ಅಥವಾ ಅರಣ್ಯ ಪ್ರದೇಶಗಳಲ್ಲಿ ಪ್ರವಾಸಿಗರನ್ನು ಕರೆದೊಯ್ದಲ್ಲಿ ದುಷ್ಕರ್ಮಿಗಳಿಂದ ಅಥವಾ ಕಾಡು ಪ್ರಾಣಿಗಳಿಂದ ಸಂಭವಿಸುವ ದುರ್ಘಟನೆಗಳಿಗೆ ಆಯಾ ಮಾಲೀಕರು ಜವಾಬ್ದಾರರಾಗುತ್ತಾರೆ ಹಾಗೂ ಕಾನೂನಿನ್ವಯ ಶಿಕ್ಷಾರ್ಹ ಅಪರಾಧಕ್ಕೆ ಒಳಪಡುತ್ತಾರೆ.












Click it and Unblock the Notifications