ಕೊಲ್ಲೂರು ಮೂಕಾಂಬಿಕಾ ಕಾರಿಡಾರ್: ವಿಮಾನ ನಿಲ್ದಾಣ ಸೇರಿ ಏನಿದು ಯೋಜನೆ?
ಉಡುಪಿ, ಆಗಸ್ಟ್ 08: ಕೊಲ್ಲೂರು ಮೂಕಾಂಬಿಕಾ ದೇವಾಲಯ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿದೆ. ಕರ್ನಾಟಕ ಮಾತ್ರವಲ್ಲದೇ ವಿವಿಧ ರಾಜ್ಯಗಳ ಭಕ್ತರು ಆಗಮಿಸುವ ಪ್ರಮುಖ ಧಾರ್ಮಿಕ ಕೇಂದ್ರವಿದು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ದೇವಾಲಯದ ಅಭಿವೃದ್ಧಿಗಾಗಿ, ಭಕ್ತರಿಗೆ ಮೂಲಕ ಸೌಕರ್ಯ ಒದಗಿಸಲು 'ಕೊಲ್ಲೂರು ಮೂಕಾಂಬಿಕಾ ಕಾರಿಡಾರ್' ಯೋಜನೆ ರೂಪಿಸಲಾಗುತ್ತಿದೆ.
ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ವಿವಿಧ ಕೇಂದ್ರ ಸಚಿವರನ್ನು ಭೇಟಿಯಾಗಿ 'ಕೊಲ್ಲೂರು ಮೂಕಾಂಬಿಕಾ ಕಾರಿಡಾರ್' ಯೋಜನೆ ಕುರಿತು ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹಾಗೂ ಕೊಲ್ಲೂರು ದೇವಾಲಯದ ಮಾಜಿ ಆಡಳಿತ ಧರ್ಮದರ್ಶಿ ಕೃಷ್ಣ ಪ್ರಸಾದ ಅಡಯಂತಾಯ ಸೇರಿ ಅನೇಕರು ಉಪಸ್ಥಿತರಿದ್ದರು.

'ಕೊಲ್ಲೂರು ಮೂಕಾಂಬಿಕಾ ಕಾರಿಡಾರ್' ನಿರ್ಮಾಣದ ಬಗ್ಗೆ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುತ್ತಾರೆ ಎಂದು ಸಂಸದರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಹಾಗಾದರೆ ಏನಿದು ಯೋಜನೆ? ಇಲ್ಲಿವೆ ವಿವರಗಳು.
ಕೊಲ್ಲೂರು ಮೂಕಾಂಬಿಕಾ ಕಾರಿಡಾರ್: ಸಂಸದ ಬಿ. ವೈ. ರಾಘವೇಂದ್ರ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್, ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮ ಮೋಹನ ನಾಯ್ಡು ಭೇಟಿ ಮಾಡಿದ್ದಾರೆ. ಈ ಯೋಜನೆಯಲ್ಲಿ ಬೈಂದೂರಿನಲ್ಲಿ 'ಮೂಕಾಂಬಿಕಾ ವಿಮಾನ ನಿಲ್ದಾಣ' ನಿರ್ಮಾಣ ಮಾಡುವುದು ಸೇರಿದೆ.
ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಮನವಿ ಸಲ್ಲಿಸಲಾಗಿದೆ. ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಾಲಯವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ. ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000ಕ್ಕೂ ಹೆಚ್ಚು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ.
ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದ ಅತೀ ಸಮೀಪವಿರುವ ಒತ್ತಿನೆಣೆಯಲ್ಲಿ ಸುಮಾರು 500 ಎಕರೆಗೂ ಅಧಿಕ ಸ್ಥಳ ಲಭ್ಯವಿದೆ. ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಭಕ್ತಾದಿಗಳಿಗೆ ಅನುಕೂಲವಾಗಲಿದೆ. ಆದ್ದರಿಂದ ಮೂಕಾಂಬಿಕಾ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡಬೇಕು ಎಂದು ಮನವಿ ಮಾಡಲಾಗಿದೆ. ಕೇಂದ್ರ ಸಚಿವರು ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ.
ಉಳಿದಂತೆ 'ಕೊಲ್ಲೂರು ಮೂಕಾಂಬಿಕಾ ಕಾರಿಡಾರ್' ಕುರಿತು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಸುಮಾರು 1200 ವರ್ಷಗಳ ಇತಿಹಾಸವಿರುವ ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಹಲವು ಯೋಜನೆ ರೂಪಿಸಲಾಗಿದೆ.
ಕ್ಷೇತ್ರದಲ್ಲಿ ಮೂಲಸೌಕರ್ಯದ ಜೊತೆಗೆ ಸೌಪರ್ಣಿಕಾ ನದಿ ಸ್ವಚ್ಛತೆ, ಶಂಕರಾಚಾರ್ಯ ಥೀಮ್ ಪಾರ್ಕ್, ಮಲ್ಟಿಲೆವೆಲ್ ಪಾರ್ಕಿಂಗ್, ವಿಮಾನ, ರೈಲ್ವೆ, ಬಸ್ ಹಾಗೂ ಬಂದರು ಸಂಪರ್ಕ, ಕೇಬಲ್ ಕಾರ್, ಬೈಂದೂರಿನ ಇತಿಹಾಸ ಪ್ರಸಿದ್ಧ ದೇವಾಲಯಗಳಿಗೆ ರಸ್ತೆ ಸಂಪರ್ಕ, ಕಡಲ ತೀರ ಹಾಗೂ ಜಲಪಾತಗಳ ಅಭಿವೃದ್ಧಿ, ಪಂಚಗಂಗಾವಳಿ ನದಿ ಅಭಿವೃದ್ಧಿ ಸಹಿತ ಹಲವು ಯೋಜನೆಗಳನ್ನು ಕಾರಿಡಾರ್ ಒಳಗೊಂಡಿದೆ.











Click it and Unblock the Notifications