Mysuru Dasara Package tour: ಪ್ರವಾಸಿಗರಿಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್-ಮಾರ್ಗ, ದರ, ದಿನಾಂಕಗಳ ವಿವರ ತಿಳಿಯಿರಿ
ಮೈಸೂರು , ಅಕ್ಟೋಬರ್, 06: ಈಗಾಗಲೇ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಇನ್ನು ಇದೀಗ ಕಾರ್ಯಕ್ರಮಗಳು ಆರಂಭವಾಗಿದ್ದು, ಈ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಜಿಲ್ಲೆ, ರಾಜ್ಯ ಅಲ್ಲದೆ, ವಿದೇಶಗಳಿಂದಲೂ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಈ ಹಿನ್ನೆಲೆ ಪ್ರವಾಸಿಗರಿಗೆ ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ಗಳನ್ನು ಘೋಷಣೆ ಮಾಡಿದೆ.
ಮೈಸೂರು ದಸರಾ ಮಹೋತ್ಸವದ ನಿಮಿತ್ತ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮ ಗಿರಿದರ್ಶಿನಿ, ದೇವದರ್ಶಿನಿ ಹಾಗೂ ಜಲದರ್ಶಿನಿ ಮೂಲಕ ಮೈಸೂರು ಮತ್ತು ಸುತ್ತಮುತ್ತಲ ಪ್ರವಾಸಿ ತಾಣಗಳನ್ನು ವೀಕ್ಷಿಸುವ ಅವಕಾಶ ಪ್ಯಾಕೇಜ್ ಟೂರ್ ಮೂಲಕ ಮಾಡಿಕೊಟ್ಟಿದೆ.

* ಗಿರಿದರ್ಶಿನಿಯಡಿ ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟಕ್ಕೆ ಪ್ರಯಾಣ ದರ ವಯಸ್ಕರಿಗೆ 400 ರೂಪಾಯಿ ಮತ್ತು ಮಕ್ಕಳಿಗೆ 250 ರೂಪಾಯಿ ನಿಗಧಿಪಡಿಸಲಾಗಿದೆ. ಜಲದರ್ಶಿನಿಯಲ್ಲಿ ಗೋಲ್ಡನ್ ಟೆಂಪಲ್ (ಬೈಲಕುಪ್ಪೆ), ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಮತ್ತು ಕೆ.ಆರ್.ಎಸ್.ಗೆ ಪ್ರಯಾಣ ದರ ವಯಸ್ಕರಿಗೆ 450 ರೂಪಾಯಿ ಮತ್ತು ಮಕ್ಕಳಿಗೆ 300 ರೂಪಾಯಿ ನಿಗಧಿಪಡಿಸಲಾಗಿದೆ.
* ದೇವದರ್ಶಿನಿಯಡಿ ನಂಜನಗೂಡು, ಬ್ಲಫ್, ಮುಡುಕುತೊರೆ, ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣಕ್ಕೆ ಪ್ರಯಾಣ ಮಾಡಲಾಗುತ್ತದೆ. ವಯಸ್ಕರಿಗೆ 300 ರೂಪಾಯಿ ಮತ್ತು ಮಕ್ಕಳಿಗೆ 200 ರೂಪಾಯಿ ನಿಗಧಿಪಡಿಸಲಾಗಿದೆ. ಈ ಪ್ಯಾಕೇಜ್ ವ್ಯವಸ್ಥೆ ಅಕ್ಟೋಬರ್ 15ರ ವರೆಗೆ ಇರಲಿದ್ದು, ಬೆಳಗ್ಗೆ ಮೈಸೂರಿನಿಂದ ಹೊರಟು ನಿಗಧಿಪಡಿಸಿದ ವಿವಿಧ ಸ್ಥಳಗಳಿಗೆ ತೆರಳಿ ಸಾಯಂಕಾಲ ಮೈಸೂರಿಗೆ ವಾಪಸ್ಸಾಗಲಿವೆ.
* ಪ್ರವಾಸಿಗರು ಇ-ಟಿಕೇಟ್ ಬುಕಿಂಗ್ ಅನ್ನು www.ksrtc.karnataka.gov.in ವೆಬ್‍ಸೈಟ್ ಅಥವಾ ಮೊಬೈಲ್ ಮುಖಾಂತರ ಮಾಡಬಹುದಾಗಿದೆ. ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಾರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಾಹಿತಿ ಕೇಂದ್ರವನ್ನು ಪ್ರತ್ಯೇಕವಾಗಿ ತೆರೆಯಲಾಗುತ್ತದೆ.
* ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ನೆರೆ ರಾಜ್ಯಗಳಾದ ಆಂಧ್ರ್ರ ಪ್ರದೇಶ, ತೆಲಂಗಾಣ, ಕೇರಳ, ಗೋವಾ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಪುದುಚೇರಿ ರಾಜ್ಯಗಳಲ್ಲಿರುವ ಒಟ್ಟು 694 ಗಣಕೀಕೃತ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳ ಮೂಲಕ ನಿಗಮದ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
* ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್ ಅನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡುತ್ತಿದ್ದು, ಹೆಚ್ಚುವರಿ ಬಸ್‌ಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
* ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡವಾಗಿ ಕಾಯ್ದಿರಿಸಲಾಗಿರುವ ಟಿಕೇಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ, ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸುವುದು ಅಗತ್ಯ. ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು, ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗುತ್ತದೆ.












Click it and Unblock the Notifications