ದಸರಾ ಹಿನ್ನೆಲೆ NWKSRTCಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್‌ಗಳ ವ್ಯವಸ್ಥೆ, ಮಾರ್ಗಗಳು, ದಿನಾಂಕಗಳ ವಿವರ ತಿಳಿಯಿರಿ
ಹುಬ್ಬಳ್ಳಿ, ಅಕ್ಟೋಬರ್, 16: ದಸರಾ ಹಬ್ಬಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳ ವಿವಿಧ ಸ್ಥಳಗಳಿಂದ ಆಗಮಿಸುವ ಹಾಗೂ ಹಬ್ಬ ಮುಗಿಸಿಕೊಂಡು ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ (NWKSRTC) ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
ಅಕ್ಟೋಬರ್ 21ರಂದು ವಾರಾಂತ್ಯ ಶನಿವಾರ, 22ರಂದು ಭಾನುವಾರ, 23ರಂದು ಸೋಮವಾರ ಮಹಾನವಮಿ, ಆಯುಧಪೂಜೆ ಹಾಗೂ 24ರಂದು ಮಂಗಳವಾರ ವಿಜಯದಶಮಿ ಇದೆ. ಹಬ್ಬ ಆಚರಿಸಲು ಅಕ್ಟೋಬರ್ 20ರಂದು ಶುಕ್ರವಾರ ಮತ್ತು 21ರಂದು ಶನಿವಾರ ಬೆಂಗಳೂರು, ಮಂಗಳೂರು, ಗೋವಾ, ಮಹಾರಾಷ್ಟ್ರದ ಪುಣೆ ಸೇರಿದಂತೆ ರಾಜ್ಯ ಮತ್ತು ನೆರೆ ರಾಜ್ಯಗಳ ವಿವಿಧ ಭಾಗಗಳಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸ್ವಂತ ಊರುಗಳಿಗೆ ಬರುವ ನಿರೀಕ್ಷೆ ಇದೆ.

ಹಬ್ಬಕ್ಕೆ ಆಗಮಿಸುವ ಪ್ರಯಾಣಿಕರಿಗೆ ಅನುಕಲ ಆಗುವಂತೆ ಅಕ್ಟೋಬರ್ 20, 21 ಹಾಗೂ 22ರಂದು ಬೆಂಗಳೂರು, ಮಂಗಳೂರು, ಪುಣೆ, ಗೋವಾ ಮತ್ತಿತರ ಸ್ಥಳಗಳಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಸ್ಥಳೀಯ ಬಸ್ ನಿಲ್ದಾಣಗಳಿಂದ ಜಿಲ್ಲೆಯೊಳಗೆ ಹಾಗೂ ನೆರೆ ಜಿಲ್ಲೆಗಳಿಗೆ ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗುತ್ತದೆ.
ಇದಕ್ಕಾಗಿ ಮಲ್ಟಿ ಆಕ್ಸಲ್ ವೋಲ್ವೊ, ಸ್ಲೀಪರ್, ರಾಜಹಂಸ ಸೇರಿದಂತೆ ಮುಂತಾದ 50 ಪ್ರತಿಷ್ಟಿತ ಐಶಾರಾಮಿ ಬಸ್ಸುಗಳು ಹಾಗೂ 200 ವೇಗದೂತ ಸಾರಿಗೆಗಳು ಸೇರಿದಂತೆ 250ಕ್ಕೂ ಹೆಚ್ಚು ಹೆಚ್ಚುವರಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ.
ಅದೇ ರೀತಿ ಹಬ್ಬ ಮುಗಿಸಿಕೊಂಡು ಸ್ವಂತ ಊರುಗಳಿಂದ ಹಿಂದಿರುವ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 24 ಹಾಗೂ 25ರಂದು ಸಂಸ್ಥೆ ವ್ಯಾಪ್ತಿಯ ಪ್ರಮುಖ ಬಸ್ ನಿಲ್ದಾಣಗಳಿಂದ ಬೆಂಗಳೂರು, ಮಂಗಳೂರು, ಗೋವಾ, ಮಹಾರಾಷ್ಟ್ರದ ಪುಣೆ ಸೇರಿದಂತೆ ರಾಜ್ಯ ಮತ್ತು ನೆರೆಯ ರಾಜ್ಯಗಳ ವಿವಿಧ ಜನದಟ್ಟಣೆಗೆ ಅನುಗುಣವಾಗಿ 250ಕ್ಕೂ ಹೆಚ್ಚು ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ನಡೆಸಲಿವೆ.
ಟಿಕೆಟ್ ಬುಕ್ಕಿಂಗ್ ಮಾಡುವ ವಿಧಾನ
ಸಂಸ್ಥೆಯ ವೆಬ್‌ಸೈಟ್ www.ksrtc.in ಅಥವಾ KSRTC Mobile App, ಅಧಿಕೃತ ಫ್ರಾಂಚೈಸಿಗಳು ಹಾಗೂ ಪ್ರಮುಖ ಬಸ್ ನಿಲ್ದಾಣಗಳಲ್ಲಿರುವ ಟಿಕೆಟ್ ಕೌಂಟರ್‌ಗಳಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ನಾಲ್ಕು ಅಥವಾ ಹೆಚ್ಚು ಆಸನಗಳನ್ನು ಒಂದೇ ಟಿಕೆಟ್‌ನಲ್ಲಿ ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುತ್ತದೆ.
ಹೋಗುವ ಹಾಗೂ ಬರುವ ಪ್ರಯಾಣಕ್ಕೆ ಒಂದೇ ಟಿಕೆಟ್ ಪಡೆದರೆ ಹಿಂದಿರುಗುವ ಪ್ರಯಾಣ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುತ್ತದೆ. ಕೊನೆಯ ಕ್ಷಣದ ರಷ್‌ನಿಂದ ತಪ್ಪಿಸಿಕೊಳ್ಳಲು ಕೂಡಲೆ ಮುಂಗಡ ಬುಕ್ಕಿಂಗ್ ಮಾಡಿಕೊಳ್ಳುವುದು ಸೂಕ್ತ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKSRTC) ಪ್ರಕಟಣೆಯಲ್ಲಿ ತಿಳಿಸಿದೆ.












Click it and Unblock the Notifications